ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ಭೀಕರ ಬರಗಾಲ ಮತ್ತು ಸರ್ಕಾರದ ಇತ್ತೀಚಿನ ಬೆಲೆ ಏರಿಕೆಯ ಪ್ರಸ್ತಾಪಗಳು ಜನಸಾಮಾನ್ಯರನ್ನು ಆರ್ಥಿಕವಾಗಿ ಹೈರಾಣಾಗಿಸಿವೆ. ಈ ವೇಳೆ ಹಾಲಿನ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸುವ ಕ್ರಮ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಈ ಕುರಿತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಭೀಕರ ಬರಗಾಲ ತಾಂಡವವಾಡುತ್ತಿದೆ. ಲಕ್ಷಾಂತರ ರೈತ ಕುಟುಂಬಗಳು ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಳ್ಳಿಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಗ್ರಾಮೀಣ ಭಾಗದಿಂದ ಶ್ರಮಿಕರು ಮತ್ತು ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ನಗರಗಳಿಗೆ ವಲಸೆ ಬರುತ್ತಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ರೈತರಿಗೆ ಹಾಗೂ ದುಡಿಯುವ ಕೈಗಳಿಗೆ ಸರ್ಕಾರ ಆಸರೆಯಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:
ಸರ್ಕಾರ ಇಂತಹ ಸಮಯದಲ್ಲಿ ಸಚಿವ ಸಂಪುಟದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ತೀರ್ಮಾನಿಸಿರುವುದು ಮತ್ತು ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರವನ್ನು ಶೇ. 20 ರಿಂದ 40ರಷ್ಟು ಏರಿಕೆ ಮಾಡಲು ಉದ್ದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಾಲು ಮತ್ತು ಸಾರ್ವಜನಿಕ ಸಾರಿಗೆಯು ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ನಾಗರಿಕನ ದೈನಂದಿನ ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಇವುಗಳ ದರ ಏರಿಕೆಯ ನಿರ್ಧಾರವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಅಥವಾ ಕನಿಷ್ಟ ಮಟ್ಟಕ್ಕೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.



