ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು, ಯುವಕರು ಹಾಗೂ ಉತ್ತರ ಕರ್ನಾಟಕದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಬಾಗಲಕೋಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 24 ವರ್ಷಗಳ ಸಾರ್ವಜನಿಕ ಜೀವನ ಹಾಗೂ 2014ರಿಂದ ಪ್ರಧಾನಿಯಾಗಿ ನಡೆಸುತ್ತಿರುವ ಆಡಳಿತ ದೇಶದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ಗುರಿಗೆ ಜನರ ಬೆಂಬಲವಿದೆ ಎಂದರು.
ಎಸ್ಐಆರ್ (ವಿಶೇಷ ಮತದಾರರ ಪರಿಶೀಲನೆ) ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಕಾಂಗ್ರೆಸ್ ಅರಾಜಕತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಬರ ಪರಿಹಾರ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಹೆಚ್ಚಳ, ರೈತರ ಸಾಲಮನ್ನಾ ಸೇರಿದಂತೆ ಹಲವು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ರೈತರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:
ಮುಖ್ಯಮಂತ್ರಿ ಬೆಂಗಳೂರಿನ ಅಭಿವೃದ್ಧಿಗೆ ಮಾತ್ರ ಸೀಮಿತರಾಗಿದ್ದಾರೆ. ರಿಯಲ್ ಎಸ್ಟೇಟ್ಗೆ ಇರುವ ಆಸಕ್ತಿ ರೈತರ ಬಗ್ಗೆ ಇಲ್ಲ ಎಂದು ಆರೋಪಿಸಿದ ಅವರು, ವಿಶ್ವ ಬ್ಯಾಂಕ್ ಸಾಲ ಪಡೆದು ರಿಂಗ್ ರೋಡ್ ಯೋಜನೆಗಳಿಗೆ ಮುಂದಾಗಿರುವ ಸರ್ಕಾರ ರೈತರ ಸಮಸ್ಯೆಗಳನ್ನು ಕಡೆಗಣಿಸಿದೆ ಎಂದರು.
ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಸಾವಿರಾರು ಕೋಟಿ ರೂ. ಬಾಕಿ ಉಳಿದಿದ್ದು, ಬಸ್ಗಳಿಗೆ ಡೀಸೆಲ್ ಹಾಕಲು ಹಣದ ಕೊರತೆ ಉಂಟಾಗಿದೆ. ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ಕಡಿಮೆಯಾಗಿರುವ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸ್ಟಿಂಗ್, ಡಿಂಗ್, ಆಪರೇಶನ್ ಮಾಡಿ ಯಾರು ಅಧಿಕಾರಕ್ಕೆ ರಾಜ್ಯದಲ್ಲಿ ಯಾರು ಬಂದಿದ್ದಾರೆ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ ಎಂದರು. ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು. ಸಮಾಜಗಳ ನಡುವೆ ವೈಷಮ್ಯ ಮೂಡಿಸಿ ಅಧಿಕಾರ ಉಳಿಸಿಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಿಸಿದರು.
2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಬೇಸತ್ತಿದ್ದು, ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಸಂಸದರಾದ ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಮಲ್ಲಯ್ಯ ಮೂಗನೂರಮಠ, ಸತ್ಯನಾರಾಯಣ ಹೇಮಾದ್ರಿ ಹಾಗೂ ವಿಭಾಗೀಯ ಪ್ರಮುಖ ಸಂಜಯ ಪಾಟೀಲ ಉಪಸ್ಥಿತರಿದ್ದರು.


