October 9, 2026
Friday, October 9, 2026
spot_img

WEATHER | ಮತ್ತೆ ಬದಲಾಗಲಿದೆ ಹವಾಮಾನ: ರಾಜ್ಯದ ಹಲವೆಡೆ ಮಳೆ, ಅ.15ರಿಂದ ಹಿಂಗಾರು ಆರಂಭದ ಸುಳಿವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿವೆ. ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದರ ಬೆನ್ನಲ್ಲೇ ಅಕ್ಟೋಬರ್ 15ರಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯೂ ದಟ್ಟವಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ, ಮಲೆನಾಡಿನಲ್ಲೂ ಮಳೆ ಸಾಧ್ಯತೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ನಡುವೆ ಮೋಡ ಕವಿದ ವಾತಾವರಣ ಕಂಡುಬರಬಹುದು. ಕೊಡಗು, ಹಾಸನದ ಸಕಲೇಶಪುರ ಸುತ್ತಮುತ್ತ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಮತ್ತು ಕಳಸ ಭಾಗಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು.

ಅಕ್ಟೋಬರ್ 15ರಿಂದ ಹಿಂಗಾರು ಮಳೆಯ ನಿರೀಕ್ಷೆ

ಉತ್ತರ ದಿಕ್ಕಿನಿಂದ ಶುಷ್ಕ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಅಕ್ಟೋಬರ್ 15ರಿಂದ ಉತ್ತರ ಒಳನಾಡಿನಲ್ಲಿಯೂ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆ ಕ್ಷೀಣಿಸುವ ಹಂತದಲ್ಲಿದ್ದರೂ, ಹಿಂಗಾರು ಮಳೆಯ ಆಗಮನ ಹೊಸ ನಿರೀಕ್ಷೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಮಳೆಯ ಸ್ವರೂಪ ಹೇಗೆ ಬದಲಾಗಲಿದೆ ಎಂಬುದನ್ನು ಹವಾಮಾನ ಇಲಾಖೆಯ ನವೀಕೃತ ಮುನ್ಸೂಚನೆಗಳು ನಿರ್ಧರಿಸಲಿವೆ.

Must Read