October 9, 2026
Friday, October 9, 2026
spot_img

ವಿನಯ್ ಕುಲಕರ್ಣಿ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಅ.27ಕ್ಕೆ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 27ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ:

ಸಿಬಿಐ ಪರ ವಕೀಲರು ಶಿಕ್ಷೆ ಅಮಾನತು ಅಪರೂಪದ ಸಂದರ್ಭಗಳಲ್ಲಿ ಮಾತ್ರ ನೀಡಬೇಕು ಎಂದು ವಾದಿಸಿದರು. ಹಿಂದಿನ ಜಾಮೀನು ರದ್ದತಿ ಹಾಗೂ ಎರಡು ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಹೈಕೋರ್ಟ್‌ಗೆ ತಿಳಿಸದಿರುವ ಆರೋಪಗಳನ್ನೂ ಪ್ರಸ್ತಾಪಿಸಿದರು. ವಿನಯ್ ಕುಲಕರ್ಣಿ ಪರ ವಕೀಲರು ಇತರ ಆರೋಪಿಗಳ ಅರ್ಜಿಗಳೊಂದಿಗೆ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

ಏನಿದು ಪ್ರಕರಣ?

2016ರ ಜೂನ್ 15ರಂದು ಧಾರವಾಡದಲ್ಲಿ ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆಯಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್‌ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಜುಲೈ 31ರಂದು ಹೈಕೋರ್ಟ್ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿತ್ತು.

ಅಕ್ಟೋಬರ್ 27ರಂದು ಸುಪ್ರೀಂ ಕೋರ್ಟ್‌ನಲ್ಲಿ ಮುಂದಿನ ವಿಚಾರಣೆ ನಡೆಯಲಿದ್ದು, ಪ್ರಕರಣದ ಮುಂದಿನ ಕಾನೂನು ಬೆಳವಣಿಗೆಗಳತ್ತ ಗಮನ ನೆಟ್ಟಿದೆ.

Must Read