ಹೊಸದಿಗಂತ ವರದಿ ವಿಜಯಪುರ:
ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಬರಗಾಲದ ವಿಚಾರದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯೋಗ ಭರ್ತಿ ಮಾಡದೆ ಯುವಕರ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಯುವಕರು ಆಕ್ರೋಶಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಐದು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ಕೃಷಿ ಚಟುವಟಿಕೆಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ ಎಂದರು.
ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುಜರಾತ್ ಮುಖ್ಯಮಂತ್ರಿಯಾಗಿ 2001ರಲ್ಲಿ ಸಾರ್ವಜನಿಕ ಜೀವನ ಆರಂಭಿಸಿ, 2014ರಲ್ಲಿ ದೇಶದ ಪ್ರಧಾನಮಂತ್ರಿಯಾದ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ 25 ವರ್ಷಗಳ ಸಾರ್ವಜನಿಕ ಜೀವನವನ್ನು ಸೇವಾ ಸಂಕಲ್ಪದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ರಾಂತಿ ಪಡೆಯದೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್’ ಎಂಬ ಧ್ಯೇಯದೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.
ಸಂಸದ ರಮೇಶ ಜಿಗಜಿಣಗಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು
ಸುದ್ದಿಗೋಷ್ಠಿಯಲ್ಲಿ ಇದ್ದರು.



