October 9, 2026
Friday, October 9, 2026
spot_img

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಸಿಇಸಿ ರಾಜೀನಾಮೆಗೆ ಆಗ್ರಹಿಸಿದ ‘ಇಂಡಿಯಾ’ ಒಕ್ಕೂಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ   ಸಂಸದರು ಸಂಸತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಬೃಹತ್ ಪಾದಯಾತ್ರೆ ನಡೆಸಿ CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಂಟಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಸೆಂಟ್ರಲ್ ಹಾಲ್‌ನಲ್ಲಿ 16 ಪಕ್ಷಗಳ ಜಂಟಿ ರಣತಂತ್ರ

ರಾಷ್ಟ್ರಪತಿ ಭವನದತ್ತ ಹೆಜ್ಜೆ ಇಡುವ ಮುನ್ನ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ‘ಇಂಡಿಯಾ’ ಒಕ್ಕೂಟದ 150 ಕ್ಕೂ ಹೆಚ್ಚು ನಾಯಕರ ಮಹತ್ವದ ಜಂಟಿ ಸಭೆ ನಡೆಯಿತು. ದೇಶದ ಒಟ್ಟು 16 ಪ್ರಮುಖ ವಿರೋಧ ಪಕ್ಷಗಳ ನಾಯಕರು ಒಟ್ಟಾಗಿ ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಅದರ ನಿಷ್ಪಕ್ಷಪಾತತೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು. ಚುನಾವಣಾ ಆಯೋಗವು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಅಕ್ರಮ ಎಸಗಿದೆ ಎಂದು ಆಕ್ರೋಶ ಹೊರಹಾಕಿದರು.

ಬಿಗಿ ಬಂದೋಬಸ್ತ್, ಇಂಟರ್ನೆಟ್ ನಿಷೇಧ

ಮತ್ತೊಂದೆಡೆ, ಶನಿವಾರದಂದು CJP ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿಯ ಜನಪಥ್-ಕರ್ತವ್ಯ ಪಥ್ ಜಂಕ್ಷನ್ ಮತ್ತು ಜಂತರ್ ಮಂತರ್ ಸುತ್ತಮುತ್ತಲಿನ 4 ಕಿ.ಮೀ. ವ್ಯಾಪ್ತಿಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಸತತ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕೇಂದ್ರ ಗೃಹ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ರಾಷ್ಟ್ರಪತಿಗಳ ಮುಖಾಮುಖಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ದೇಶದ ಜನರ ಮತದ ಹಕ್ಕನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಕೊನೆಯ ಹೋರಾಟ ಎಂದು ತಿಳಿಸಿದ್ದಾರೆ.

Must Read