ಹೊಸದಿಗಂತ ವರದಿ ಕಲಬುರಗಿ:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಇಂಡಿಯಾ ಒಕ್ಕೂಟದ ವತಿಯಿಂದ ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮುಖ್ಯ ಚುನಾವಣಾ ಆಯುಕ್ತರು ಕೆಲವರ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಅವರನ್ನು ವಜಾಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಈ ಹೋರಾಟಕ್ಕೆ ಯುವಕರು ಕೂಡ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
ಇಂಡಿಯಾ ಒಕ್ಕೂಟದ ವತಿಯಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಈಗಾಗಲೇ ಸಮಯ ಕೋರಲಾಗಿದೆ. ಸಂಜೆ 5ರಿಂದ 6 ಗಂಟೆಯೊಳಗೆ ಭೇಟಿಗೆ ಸಮಯ ನೀಡುವಂತೆ ಮನವಿ ಮಾಡಿದ್ದು, ಭೇಟಿಯ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.



