ಹೊಸದಿಗಂತ ವರದಿ ತುಮಕೂರು:
ನಗರದ ಸದಾಶಿವನಗರದ 8ನೇ ಕ್ರಾಸ್ನಲ್ಲಿರುವ ಶೆಡ್ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ, ಗೋಮಾಂಸ ಸಹಿತ ನವಾಜ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಸದಾಶಿವನಗರದ 8ನೇ ಕ್ರಾಸ್ನ ಶೆಡ್ನಲ್ಲಿ ನವಾಜ್ ಎಂಬ ವ್ಯಕ್ತಿ ಗೋಮಾಂಸ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಬಜರಂಗದಳ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ERSS-112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನವಾಜ್ನನ್ನು ವಶಕ್ಕೆ ಪಡೆದು, ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



