November 22, 2026
Sunday, November 22, 2026
spot_img

ತಂಬಾಕು ಮುಕ್ತ ಕರಾವಳಿಯತ್ತ ದಿಟ್ಟ ಹೆಜ್ಜೆ: ಇನ್ಮುಂದೆ ಬೀಡಿ ಸಿಗರೇಟ್ ಮಾರಿದರೆ ಪರವಾನಗಿಯೇ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆ ತಂಬಾಕು ವ್ಯಸನದ ಸುಳಿಗೆ ಸಿಲುಕುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ, ಇದಕ್ಕೆ ಕಡಿವಾಣ ಹಾಕಲು ಕಠಿಣ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಿಲ್ಲೆಯಾದ್ಯಂತ ಬೀಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಮೀರುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

ಪರವಾನಗಿಗೆ ಹೊಸ ಷರತ್ತು ಕಡ್ಡಾಯ

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಅಂಗಡಿ, ಹೊಟೇಲ್ ಗಳಿಗೆ ಹೊಸ ವ್ಯಾಪಾರ ಪರವಾನಗಿ ನೀಡುವಾಗ ಅಥವಾ ನವೀಕರಿಸುವಾಗ ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ’ ಎಂಬ ಎಚ್ಚರಿಕೆ ಫಲಕ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿ ಬೀಡಿ ಸಿಗರೇಟ್ ಮಾರಾಟ ಮಾಡುವುದು ಕಂಡುಬಂದರೆ, ಅಂತಹ ಅಂಗಡಿಗಳ ಪರವಾನಗಿಯನ್ನೇ ರದ್ದುಗೊಳಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಂಟಿ ಕಾರ್ಯಾಚರಣೆ ಮತ್ತು ದಿಢೀರ್ ದಾಳಿ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹೊಟೇಲ್, ಕೆಫೆಗಳು ಹಾಗೂ ಬೀಡಿ ಸಿಗರೇಟ್ ಮಾರುವ ಅಂಗಡಿಗಳ ಮೇಲೆ ಆರೋಗ್ಯ ಇಲಾಖೆ, ಪೊಲೀಸರು ಮತ್ತು ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿ ನಡೆಸಲಿವೆ. ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸರ ಕಣ್ಗಾವಲು

ಸಭೆಯಲ್ಲಿ ಮಾತನಾಡಿದ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಅಪ್ರಾಪ್ತರು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಮಾರಾಟವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಯುವಕರು ದಾರಿ ತಪ್ಪುತ್ತಿದ್ದು, ಶಾಲಾ-ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಪ್ರಾಪ್ತರಿಗೆ ಮಾರಾಟ ಮಾಡುವವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

60 ದಿನಗಳ ‘ತಂಬಾಕು ಮುಕ್ತ ಯುವ ಅಭಿಯಾನ’

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ಈಗಾಗಲೇ ಅಕ್ರಮ ತಂಬಾಕು ಮಾರಾಟದ ವಿರುದ್ಧ ದಂಡ ವಿಧಿಸುವ ಕಾರ್ಯಾಚರಣೆ ಚುರುಕುಗೊಂಡಿದೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು 60 ದಿನಗಳ ಕಾಲ ನಡೆಯಲಿರುವ ‘ತಂಬಾಕು ಮುಕ್ತ ಯುವ ಅಭಿಯಾನ 4.0’ ಕ್ಕೆ ಅಪರ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಒಟ್ಟಿನಲ್ಲಿ, ಕರಾವಳಿಯ ಯುವ ಪೀಳಿಗೆಯನ್ನು ವ್ಯಸನಮುಕ್ತಗೊಳಿಸಲು ಜಿಲ್ಲಾಡಳಿತ ಸಜ್ಜಾಗಿದೆ.

Must Read

Skip to toolbar