November 7, 2026
Saturday, November 7, 2026
spot_img

ಡಿಜಿಟಲ್ ಕನಸಿಗೆ ‘ವೆಟ್ರಿ’ ಬಲ: ತಮಿಳುನಾಡಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಭಾಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವ ‘ವೆಟ್ರಿ ಲ್ಯಾಪ್‌ಟಾಪ್ ಯೋಜನೆ’ ಜಾರಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಗಾಗಿ ಬರೋಬ್ಬರಿ 2,000 ಕೋಟಿ ರೂ. ಮೀಸಲಿಡಲಾಗಿದ್ದು, ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.

ಯಾರೆಲ್ಲರಿಗೆ ಸಿಗಲಿದೆ ಉಚಿತ ಲ್ಯಾಪ್‌ಟಾಪ್?

2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಪಾಲಿಟೆಕ್ನಿಕ್ ಮತ್ತು ಐಟಿಐ ಸಂಸ್ಥೆಗಳಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವವರಿಗೂ ಅವಕಾಶ ಕಲ್ಪಿಸಲಾಗಿದೆ.

ಕಲೆ, ವಿಜ್ಞಾನ, ಎಂಜಿನಿಯರಿಂಗ್, ವೈದ್ಯಕೀಯ, ಪಶುವೈದ್ಯಕೀಯ, ಕೃಷಿ, ಮೀನುಗಾರಿಕೆ ಹಾಗೂ ಕಾನೂನು ವಿಭಾಗಗಳ ವಿದ್ಯಾರ್ಥಿಗಳು ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ವಿಶೇಷವೆಂದರೆ, 2025-26ನೇ ಸಾಲಿನಲ್ಲಿ ಲ್ಯಾಪ್‌ಟಾಪ್ ಪಡೆಯಲು ಸಾಧ್ಯವಾಗದ ವೃತ್ತಿಪರ ಕೋರ್ಸ್‌ಗಳ ಮೂರನೇ ಮತ್ತು ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಗೂ ಈ ಬಾರಿ ಅವಕಾಶ ನೀಡಲಾಗಿದೆ.

ಇದನ್ನೂ ಓದಿ:

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ

ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಲ್ಯಾಪ್‌ಟಾಪ್‌ಗಳ ತಾಂತ್ರಿಕ ಗುಣಮಟ್ಟಕ್ಕೂ ಸರ್ಕಾರ ಆದ್ಯತೆ ನೀಡಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟೆಲ್ ಕೋರ್ i5 ಅಥವಾ ಅದಕ್ಕೆ ಸಮಾನವಾದ ಸಾಮರ್ಥ್ಯದ ಪ್ರೊಸೆಸರ್ ಹೊಂದಿರುವ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಖರೀದಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರಿ ಸಂಸ್ಥೆಯಾದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ತಮಿಳುನಾಡು (ELCOT) ನಿರ್ವಹಿಸಲಿದೆ.

ಯೋಜನೆಗೆ ಸಿಎಂ ವಿಜಯ್ ನೇತೃತ್ವದ ಸಮಿತಿ

ಯೋಜನೆಯ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ವಿಜಯ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. 2,000 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ವಿತರಣೆಯ ಗುಣಮಟ್ಟ ಮತ್ತು ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಅಗತ್ಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

Must Read

Skip to toolbar