ಹೊಸದಿಗಂತ ವರದಿ ಮಡಿಕೇರಿ:
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ತಂದೆ-ಮಗನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸ್ ಸಿಬ್ಬಂದಿಗಳು ಹಾಗೂ ನಾಮೇರ ಅಂಕಿತ್ ಪೊನ್ನಪ್ಪ ಮತ್ತು ನಾಮೇರ ಅಪ್ಪಣ್ಣ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲಿ ತಂದೆ-ಮಗ ಇಬ್ಬರೂ ಸೇರಿ ಪೊಲೀಸ್ ಸಿಬ್ಬಂದಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.
ನಾಮೇರ ಅಂಕಿತ್ ಪೊನ್ನಪ್ಪ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ಘಟನೆಯಿಂದ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಪೊಲೀಸರಿಗೂ ರಕ್ಷಣೆ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಣ್ಣಪುಟ್ಟ ವಿಷಯಗಳ ಮೇಲೂ ಪೊಲೀಸರು ಕಣ್ಣಿಟ್ಟಿರುತ್ತಾರೆ. ಈಗ ತನ್ನ ಸಿಬ್ಬಂದಿಗಳಿಗೇ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದ್ದರು ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂಬ ಪ್ರಶ್ನೆಯೂ ಬಂದಿತ್ತು.
ಇದೀಗ ಎಚ್ಚೆತ್ತುಕೊಂಡಿರುವ ಗೋಣಿಕೊಪ್ಪ ಪೊಲೀಸರು ನಾಮೇರ ಅಂಕಿತ್ ಪೊನ್ನಪ್ಪ ಹಾಗೂ ನಾಮೇರ ಅಪ್ಪಣ್ಣ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.