ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕುಟುಂಬ, ಸ್ನೇಹಿತರು, ಸಹೋದ್ಯೋಗಿಗಳು ಮತ್ತು ಸರ್ಕಾರಿ ಗಣ್ಯರ ಸಮ್ಮುಖದಲ್ಲಿ ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ನಿಗಮಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಮುಂಜಾನೆ ಮಾಜಿ ಪ್ರಧಾನಿ ಅವರ ಪಾರ್ಥಿವ ಶರೀರದ ಬಳಿ ಮಾಲಾರ್ಪಣೆ ಮಾಡುವ ಮೂಲಕ ಅಂತಿಮ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಸಿಖ್ ಸಂಪ್ರದಾಯದಂತೆ ವಿಐಪಿ ಘಾಟ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಡಾ ಸಿಂಗ್ ಅವರ ಪಾರ್ಥಿವ ಶರೀರವನ್ನು ಶ್ರೀಗಂಧದ ತುಂಡುಗಳ ಚಿತೆಯ ಮೇಲೆ ಇರಿಸಲಾಯಿತು.
ಮಾಜಿ ಪ್ರಧಾನಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರು.