ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ-ಆಂಧ್ರಪ್ರದೇಶ ಗಡಿಯಲ್ಲಿ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಮೂಲಕ ಕಾರಿನಲ್ಲಿ 1,200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈಯರ್ ಮತ್ತು 6 ಡಿಟೋನೇಟರ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು.
ಈ ವೇಳೆ ಪೊಲೀಸರಿಗೆ ಅನುಮಾನ ಬಂದು ತನಿಖೆ ನಡೆಸಿದಾಗ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಸ್ಫೋಟಕಗಳನ್ನು ಸಾಗಿಸುತ್ತಿದ್ದ ಜಾಕೀರ್ ಹುಸೇನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬರು ಪರಾರಿಯಾಗಿದ್ದಾರೆ.
ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಮುನ್ನವೇ ಗಡಿಯಲ್ಲಿ ಹಲವು ಸ್ಫೋಟಕಗಳು ಪತ್ತೆಯಾಗಿರುವುದು ಪೊಲೀಸರಿಗೆ ಅನುಮಾನ ಮೂಡಿಸಿದೆ. ಆರೋಪಿಗಳು ಸ್ಫೋಟಕಗಳನ್ನು ಏಕೆ ಸಾಗಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.