ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇಂದು ನಡೆದಿದೆ.
ಗುಂಡ್ಲುಪೇಟೆಯ ಕುರುಬರಹುಂಡಿ ಮೂಲದ ರೈತ ಈಶ್ವರ್ (50) ಮೃತ ದುರ್ದೈವಿ.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು ಫ್ರೀಡಂ ಪಾರ್ಕ್ನಲ್ಲಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಈಶ್ವರ್ ಬಂದಿದ್ದರು.
ರೈಲಿನ ಮೂಲಕ ಬಂದಿಳಿದಿದ್ದ ಈಶ್ವರ್, ಪ್ರತಿಭಟನಾ ಸ್ಥಳಕ್ಕೆ ತೆರಳುವ ಮಾರ್ಗಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಸಿದು ಬಿದ್ದಿದ್ದರು.
ತಕ್ಷಣ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಈಶ್ವರ್ ಸಾವನ್ನಪ್ಪಿದ್ದಾರೆ. ಈಶ್ವರ್ ಸಾವಿಗೆ ನಿಖರವಾದ ಕಾರಣ ತಿಳಿಯಲು ಪೊಲೀಸರು ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.