ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾನುವಾರು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಕಾರು ಡಿಕ್ಕಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮರ್ಧಾಳ ಎಂಬಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತಪಟ್ಟವರು. ಶನಿವಾರ ರಾತ್ರಿ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ ೮೦೦ ಕಾರು ಇವರಿಗೆ ಡಿಕ್ಕಿಯಾಗಿತ್ತು. ಆರೋಪಿ ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಒಳರಸ್ತೆಯಲ್ಲಿ ದಿ. ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದ.
ಕಳೆದ ರಾತ್ರಿ ಈ ಅವಘಡ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಹಿಂದು ಪರ ಸಂಘಟನೆಗಳು ತಡರಾತ್ರಿ ವೇಳೆಗೆ ಕಡಬದಲ್ಲಿ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಲ್ಲದೆ, ಎಸ್ಪಿ ಸ್ಥಳಕ್ಕಾಗಮಿಸುವಂತೆ ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಹಿಂದೂ ಮುಖಂಡ ಅರುಣ್ ಪುತ್ತಿಲ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮೊದಲಾದವರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸಾಥ್ ನೀಡಿದ್ದರು.
ರಾತ್ರಿ ವೇಳೆಗೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಪ್ರತಿಭಟನಾಕಾರರ ಜೊತೆ ಮಾತನಾಡಿ, ಆರೋಪಿಗಳನ್ನು ಬಂಧಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಲಾಗಿತ್ತು. ಆರೋಪಿಗಳ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು ನೀಡಲಾಗಿತ್ತು. ಈ ನಡುವೆ ಬೆಳಗ್ಗಿನ ಜಾವ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.