ಹೊಸದಿಗಂತ ವರದಿ, ಕೊಡಗು:
ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯುಂಟಾಗುತ್ತಿದೆ ಎಂದು ಆರೋಪಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಗೆ ಮನವಿ ಸಲ್ಲಿಸಿದ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ದೇವಿಶ್ರೀ, ನಗರದ ಮಹಿಳಾ ಕಾಲೇಜಿನಲ್ಲಿ 50ಕ್ಕೂ ಹೆಚ್ಚು ಹಾಗೂ ಜೂನಿಯರ್ ಕಾಲೇಜಿನಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಉಪನ್ಯಾಸಕರ ಕೊರತೆ ಎದುರಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
2021-22ನೇ ಸಾಲಿನಲ್ಲಿ ಕಾಲೇಜು ಪ್ರಾರಂಭವಾಗಿದ್ದರೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪಾಠ ಪ್ರವಚನವಿಲ್ಲದೆ ತುಂಬಾ ತೊಂದರೆಯಾಗಿದೆ. ಮುಂದಿನ ತಿಂಗಳು ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಪಾಠ ಪೂರ್ಣಗೊಳ್ಳದೇ ಪರೀಕ್ಷೆಗಳನ್ನು ಹೇಗೆ ಎದುರಿಸುವುದೆಂಬ ಆತಂಕ ವ್ಯಕ್ತಪಡಿಸಿದರು.
ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. ಉಪನ್ಯಾಸಕರನ್ನು ನಿಯೋಜಿಸದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಪೊಲೀಸರ ಅಸಮಧಾನ: ಅನುಮತಿ ಪಡೆದುಕೊಳ್ಳದೆ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು 6 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿದರು. ಉಳಿದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಮರಳುವಂತೆ ಸೂಚಿಸಿದರು.