ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕರ ಸಂಕ್ರಾಂತಿಯ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯ ಆಟ ಭೀಕರ ದುರಂತಕ್ಕೆ ಕಾರಣವಾಗಿದೆ. ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದ ಬಳಿಯ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಮನೋಜ್ (17) ಮತ್ತು ಪ್ರಮೋದ್ ಬಡಿಗೇರ (17) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪ್ರಥಮ ಪಿಯುಸಿ ಓದುತ್ತಿದ್ದು, ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಇದ್ದ ಕಾರಣ ಈಜಲು ಮತ್ತು ಸ್ನಾನ ಮಾಡಲು ಕ್ವಾರಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ನೀರಿನ ಸೆಳವಿಗೆ ಸಿಲುಕಿ ಮುಳುಗಿದ್ದಾರೆ. ಇವರ ಜೊತೆಗಿದ್ದ ಮತ್ತೊಬ್ಬ ಬಾಲಕನನ್ನು ಸ್ಥಳೀಯರು ಸಮಯಪ್ರಜ್ಞೆ ಮೆರೆದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ಯಂತ ನೋವಿನ ಸಂಗತಿಯೆಂದರೆ, ಈ ಇಬ್ಬರೂ ಬಾಲಕರು ತಮ್ಮ ತಂದೆಯ ಕಣ್ಣೆದುರೇ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನೂ ನೀರಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಲೋಕಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆಸರೆಯಾಗಬೇಕಿದ್ದ ಮಕ್ಕಳು ಕಣ್ಣೆದುರೇ ಇಲ್ಲವಾದದ್ದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


