ಒಂಟಿ ಮಹಿಳೆ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ಪ್ರಕರಣ: ಆರೋಪಿ ಬಂಧನ

ಹೊಸ ದಿಗಂತ ವರದಿ, ಮಡಿಕೇರಿ:

ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದರೋಡೆಗೆ ಯತ್ನಿಸಿದ 12 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ನಗರದ ಜನತೆ‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರೋಪಿಯನ್ನು ನಗರದ ಹೊರವಲಯದ ಇಬ್ಬನಿ ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ( 33) ಎಂದು ಗುರುತಿಸಲಾಗಿದ್ದು ಆತನಿಂದ 27 ಗ್ರಾಂ. ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಕಾಲೇಜು ರಸ್ತೆಯಲ್ಲಿರುವ ಐಡಿಬಿಐ ಬ್ಯಾಂಕ್ ಎದುರಿಗೆ ವಾಸವಿರುವ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಗೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನುಗ್ಗಿದ ಚೋರನೊಬ್ಬ ಅವರ ಪತ್ನಿ ಸಾಕಮ್ಮ ಎಂಬವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣವನ್ನು ಕದ್ದೊಯ್ದಿದ್ದ.

ಕಬ್ಬಿಣದ ಸಲಾಕೆಯಿಂದ ಹಲ್ಲೆಗೊಳಗಾಗಿದ್ದ ಸಾಕಮ್ಮ ಜೋರಾಗಿ ಕಿರುಚಿಕೊಂಡ ಕಾರಣ ಆರೋಪಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ‌ ಸರ ಹಾಗೂ ಉಂಗುರದ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿದ್ದ ಸಾಕಮ್ಮ ಅವರನ್ನು ಸ್ಥಳೀಯರ ಸಹಕಾರದಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮನೆಯ ಪಕ್ಕದ ಖಾಸಗಿ ಆಸ್ಪತ್ರೆಯ ಕಟ್ಟಡದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಕಳ್ಳನ ಚಲನವಲನದ ದೃಶ್ಯ ಸೆರೆಯಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್ ಘಟನೆ ಕುರಿತು ಮಾಹಿತಿ ಪಡೆದು, ಆರೋಪಿಯ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ನಗರ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶ ನೀಡಿದ್ದರು. ಅಲ್ಲದೆ‌ ಸಿಸಿ ಕ್ಯಾಮರಾದಲ್ಲಿನ ದೃಶ್ಯಾವಳಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಿ ಆರೋಪಿಯ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನೂ ಕೋರಿದ್ದರು.

ಮಡಿಕೇರಿ ಗ್ರಾಮಾಂತರ‌ ಠಾಣೆಯ ಇನ್ಸ್‌ಪೆಕ್ಟರ್ ‌ ಉಮೇಶ್ ಉಪ್ಪಳಿಕೆ ಅವರೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಸಹಕರಿಸಿದ್ದರು.

ಮಡಿಕೇರಿ ನಗರ ವೃತ್ತದ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ಆರೋಪಿ ಪತ್ತೆಗಾಗಿ ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡ ಪರಿಣಾಮ ಘಟನೆ ನಡೆದ 12 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ. ಪ್ರಕರಣ ನಡೆದ 24 ಗಂಟೆಯೊಳಗೆ ಸಂಪೂರ್ಣ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಶ್ರಮವನ್ನು ಅವರು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!