Sunday, December 3, 2023

Latest Posts

ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪತಿ ಇದ್ದರೂ ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆ ತನ್ನ ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಪುನರ್‌ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಈ ರೀತಿ ಅಭಿಪ್ರಾಯಪಟ್ಟಿದೆ.

ಅರ್ಜಿದಾರರು ಅಕ್ರಮ ಸಂಬಂಧ ಹೊಂದಿದ್ದು, ಪ್ರಾಮಾಣಿಕರಲ್ಲದಿದ್ದಾಗ ಪತಿಯಿಂದ ಜೀವನಾಂಶ ನೀಡಬೇಕು ಎಂಬ ವಾದ ಒಪ್ಪಿಕೊಳ್ಳುವುದಿಲ್ಲ. ಪತಿಯಿಂದ ಯಾವುದೇ ನಿರೀಕ್ಷೆ ಮಾಡಬಾರದು ಎಂದು ಪೀಠ ತಿಳಿಸಿದೆ.

ಅರ್ಜಿದಾರರು ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಿರುವ ಸಂಬಂಧ ದೂರು ದಾಖಲಾಗಿದ್ದು, ತನಿಖೆ ವೇಳೆ ಆಪ್ತನೊಂದಿಗೆ ನೆಲೆಸಲು ಇಚ್ಚಿಸುತ್ತಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಇದೇ ಆಧಾರದಲ್ಲಿ ವಿಚ್ಛೇದನವೂ ಮಂಜೂರಾಗಿದೆ.

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿಲ್ಲ. ಈ ಸಂಬಂಧ ಹಿಂದೊಮ್ಮೆ ರಾಜಿ ಪಂಚಾಯತಿ ನಡೆಸಿದ ಬಳಿಕ ಗಂಡನ ಮನೆಗೆ ಕಳುಹಿಸಲಾಗಿತ್ತು. ಆದರೂ, ಅವರು ಗಂಡನನ್ನು ಬಿಟ್ಟು ಮತ್ತೊಬ್ಬ ವ್ಯಕ್ತಿಯೊಂದಿಗೆ ಸಹಜೀವನ ನಡೆಸುತ್ತಿದ್ದಾರೆ ಎಂಬುದಾಗಿ ಆಕೆಯ (ಅರ್ಜಿದಾರಳ) ಸಹೋದರ ತಿಳಿಸಿದ್ದಾರೆ.

ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸಿದಾಗ ಜೀವನ ನಡೆಸುವುದಕ್ಕಾಗಿ ಯಾವುದೇ ಆದಾಯದ ಮೂಲಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಆದರೆ, ಸಾಕ್ಷಿಗಳ ಪ್ರಕಾರ ಮತ್ತೊಂದು ವ್ಯಕ್ತಿಯೊಂದಿಗೆ ನೆಲೆಸಿದ್ದು, ಅವರೇ ಜೀವನ ನೋಡಿಕೊಳ್ಳುತ್ತಿದ್ದಾರೆ. ಎಲ್ಲ ಸಂದರ್ಭಗಳಲ್ಲಿಯೂ ಅವನೊಟ್ಟಿಗೆ ಇರುತ್ತಿರುವ ಅಂಶ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ಆದ ಕಾರಣ ಅರ್ಜಿದಾರರ ಪರಿಹಾರ ನೀಡಲಾಗದು ಎಂದು ಪೀಠ ಹೇಳಿದೆ.

ಅರ್ಜಿದಾರರ ಮನವಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸದೆ ಜೀವನಾಂಶ ನೀಡಲು ನಿರ್ದೇಶನ ನೀಡಿದೆ. ಆದರೆ, ಸೆಷನ್ಸ್ ನ್ಯಾಯಾಲಯ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಗಣಿಸಿಯೇ ಈ ಆದೇಶಿಸಿದೆ. ಇದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ನ್ಯಾಯಪೀಠ ಪುನರ್‌ಪರಿಶೀಲನಾ ಅರ್ಜಿ ವಜಾಗೊಳಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!