ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ 28 ವರ್ಷದ ಯುವಕನೊಬ್ಬ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಯಜ್ಞ ಪಾಂಡೆ ಎಂದು ಗುರುತಿಸಲಾಗಿದ್ದು, ಇಂದಿರಾಪುರಂ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದರು.
ಪೊಲೀಸ್ ಮೂಲಗಳ ಪ್ರಕಾರ, ಬೆಳಗಿನ ಜಾವ ಸುಮಾರು 2 ಗಂಟೆ ಸಮಯದಲ್ಲಿ ಯಜ್ಞ ಪಾಂಡೆ ತಮ್ಮ ಮನೆಯೊಳಗೆ ಮಣಿಕಟ್ಟು ಸೀಳಿ ಬಳಿಕ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ಕೂಡಲೇ ಕುಟುಂಬದವರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಯಜ್ಞ ಪಾಂಡೆ ಖಾಸಗಿ ಜಾಹೀರಾತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಕೆಲಕಾಲದಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ, ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಕುಟುಂಬದ ಸದಸ್ಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.


