ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ರಾಜಕೀಯದಲ್ಲಿ ಜಾರಿ ನಿರ್ದೇಶನಾಲಯದ ಕ್ರಮ ಹೊಸ ಚರ್ಚೆಗೆ ಕಾರಣವಾಗಿದೆ. ಸಚಿವ ಸಂಜೀವ್ ಅರೋರಾ ಬಂಧನದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿದೆ.
ಲುಧಿಯಾನ ಪಶ್ಚಿಮ ಕ್ಷೇತ್ರದ ಶಾಸಕನಾಗಿರುವ ಸಂಜೀವ್ ಅರೋರಾ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಚಂಡೀಗಢ ಮತ್ತು ದೆಹಲಿ-ಎನ್‌ಸಿಆರ್ ಭಾಗದ ನಾಲ್ಕು ಸ್ಥಳಗಳಲ್ಲಿ ಪರಿಶೀಲನೆ ನಡೆದಿದ್ದು, ಬಳಿಕ ಅವರನ್ನು ಅಧಿಕೃತ ನಿವಾಸದಿಂದ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:
ಈ ಕ್ರಮಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್, ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಪ್ರತಿಪಕ್ಷ ನಾಯಕರ ವಿರುದ್ಧ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ ಜನರ ಮನಸ್ಥಿತಿಯನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿರುವ ಅವರು, ಮೋದಿ ಜಿ, ಮುಂದುವರಿಯಿರಿ ಮತ್ತು ನಾಲ್ಕು ಇಡಿ ದಾಳಿಗಳನ್ನು ಮಾಡಿ – ಅವರ ಎಲ್ಲಾ ಸ್ಥಾನಗಳ ಮೇಲಿನ ಬಿಜೆಪಿಯ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ನೀವು ಬಂಧಿಸಿದವರು ನಾಲ್ಕು ದಿನಗಳಲ್ಲಿ ಹೊರಬರುತ್ತಾರೆ, ಒತ್ತಡದ ರಾಜಕಾರಣಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವರ್ಷ ಸಂಜೀವ್ ಅರೋರಾ ವಿರುದ್ಧ ಮೂರನೇ ಬಾರಿ ಇಂತಹ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಇದು ಪಂಜಾಬ್ ರಾಜಕೀಯ ವಲಯದಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.



