ಹೊಸದಿಗಂತ ವರದಿ ಬಂಟ್ವಾಳ:
ಕಾರ್ಕಳ- ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಆಸ್ಪತ್ರೆಯಿಂದಲೇ ತಮ್ಮ ಆರೋಗ್ಯದ ಕುರಿತು ಪ್ರತಿಕ್ರಿಯಿಸಿರುವ ರೈ, ದೇವರ ದಯೆ, ಜನರ ಪ್ರಾರ್ಥನೆಯಿಂದ ತಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಸೋಮವಾರ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ್ ಸ್ವಾಮೀಜಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ರೈ ಹಾಗೂ ಇದೇ ಅಪಘಾತದಲ್ಲಿ ಗಾಯಗೊಂಡಿರುವ ಅವರ ಆಪ್ತ ಸಹಾಯಕ ಡೆಂಜಿಲ್, ಕಾರು ಚಾಲಕರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕೂಡಾ ಆಸ್ಪತ್ರೆಗೆ ತೆರಳಿ ರಮಾನಾಥ ರೈ ಹಾಗೂ ಇತರ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ:
ಸಿಎಂ, ಕೆಪಿಸಿಸಿ ಅಧ್ಯಕ್ಷರಿಂದ ಆರೋಗ್ಯ ವಿಚಾರಣೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸೋಮವಾರ ರಮಾನಾಥ ರೈ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ಸಂದರ್ಭ ಬಂಟ್ವಾಳ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಭಾನುವಾರ ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿತ್ತು. ಅಪಘಾತದಲ್ಲಿ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.



