ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಲಿಟರಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಮೇಲೆ ಬಿಇಎಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.
ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ದೀಪ್ ರಾಜ್ ಚಂದ್ರ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಬಿಇಎಲ್ನಲ್ಲಿ ಪಿಐಡಿಸಿ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಆ ಕಂಪನಿಯ ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.
ದೀಪ್ ರಾಜ್ ಚಂದ್ರ ಕಳೆದ ಮೂರು ವರ್ಷಗಳಿಂದ ಪಾಕಿಸ್ತಾನದ ಐಎಸ್ಐ ಸಂಸ್ಥೆಯ ಮಹಿಳಾ ಗೂಢಚಾರಳ ಸಂಪರ್ಕದಲ್ಲಿದ್ದ ಎಂದು ಮೂಲಗಳು ಹೇಳಿವೆ. ಪ್ರಸ್ತುತ ಆರೋಪಿಯ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಮಿಲಿಟರಿ ಗುಪ್ತಚರ ಇಲಾಖೆ ವಶಪಡಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ.