ಬಿತ್ತನೆ ಬೀಜ ಮೊಳಕೆಯೊಡೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಸಿಎಂ

ದಿಗಂತ ವರದಿ ವಿಜಯನಗರ:

ಕೃಷಿ ಇಲಾಖೆಯಿಂದ ಒದಗಿಸಿದ ಬಿತ್ತನೆ ಬೀಜ ಮೊಳಕೆಯೊಡೆಯದಿದ್ದರೆ, ರೈತರಿಗೆ ಎರಡನೇ ಸುತ್ತಿನಲ್ಲಿ ಬಿತ್ತನೆ ಬೀಜ ಒದಗಿಸಬೇಕು. ಆಗಲೂ ಬೆಳೆಗಳು ಕೈಕೊಟ್ಟರೆ ಅದಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ಕಾಗಿ ಎಚ್ಚರಿಸಿದರು.

ಹೊಸಪೇಟೆಯ ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಕೃಷಿ ಇಲಾಖೆ‌ ಪ್ರಗತಿ ಪರಿಶೀಲನೆ‌ ವೇಳೆ ಮೇಲಿನಂತೆ ಹೇಳಿದರು.
ಈ‌ ಬಾರಿ ಸಾಧಾರಣ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು‌ ಪಡೆದಿದೆ. ರೈತರ ಬೇಡಿಕೆಯಂತೆ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು‌ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದ ಅವರು, ರೈತರಿಂದ‌ ಯಾವುದೇ ರೀತಿಯ ದೂರುಗಳು ಬಂದರೆ, ಸಹಿಸುವುದಿಲ್ಲ ಎಂದು ವಾರ್ನ‌್ ಮಾಡಿದರು.

ಸರ್ಕಾರ ಹಣ ಕೊಟ್ಟಿದೆ-ರೈತರಿಗೆ ತಲುಪಿಸಲು ಏನು ತೊಂದರೆ?:
ಸರ್ಕಾರ ಅಗತ್ಯವಿದ್ದಷ್ಟು ಹಣವನ್ನು ಕೊಟ್ಟು ಯಾವ ಕಾಲ ಆಯ್ತು. ಆದರೂ ಸರ್ಕಾರ ಕೊಟ್ಟ ಹಣವನ್ನು ರೈತರ ಕುಟುಂಬಗಳಿಗೆ ತಲುಪಿಸಲು ಏನು ತೊಂದರೆ ಆಗಿದೆ ಎಂದು ಪ್ರಶ್ನಿಸಿದ ಸಿಎಂ ಇದನ್ನು ಸಹಿಸುವುದಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಎಚ್.ಆರ್. ಗವಿಯಪ್ಪ, ಕಂಪ್ಲಿ ಗಣೇಶ್, ಎಂ.ಪಿ.ಲತಾ, ಡಾ.ಎನ್.ಟಿ. ಶ್ರೀನಿವಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!