ಹೊಸ ದಿಗಂತ ವರದಿ, ರಾಯಚೂರು:
ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿಕೊoಡಿರುವ 32 ಟಿಎಂಸಿ ಅಷ್ಟು ರಾಜ್ಯದ ನೀರನ್ನು ಪಡೆಯುವುದಕ್ಕೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಸಿಂದನೂರು ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ತಿಮ್ಮಾಪುರ ಏತ ನೀರಾವರಿ ಯೋಜನೆಯ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ತುಂಗಭದ್ರಾ ಜಲಾಶಯದ ಒಟ್ಟು 132 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯದಲ್ಲಿ 32 ಟಿಎಂಸಿಯಷ್ಟು ಹೂಳು ತುಂಬಿಕೊoಡಿದೆ ಇದರಿಂದ ರಾಜ್ಯಕ್ಕೆ ನ್ಯಾಯೋಚಿತವಾಗಿ ದೊರೆಯಬೇಕಾಗಿರುವ ನೀರು ದೊರೆಯದೇ ಇಲ್ಲಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು.
ರಾಜ್ಯದ ನೀರಿನ ಪಾಲನ್ನು ಪಡೆಯುವುದಕ್ಕೆ ನವಲಿ ಜಲಾಶಯ ನಿರ್ಮಾಣ ಮಾಡುವುದು ಅನಿವಾರ್ಯ ಮತ್ತು ಅತ್ಯಗತ್ಯ. ಈ ಜಲಾಶಯ ನಿರ್ಮಾಣದ ಸಾಧಕ ಬಾಧಕಗಳ ಕುರಿತು ತೆಲಂಗಾಣ ಮತ್ತು ಆಂದ್ರ ಪ್ರದೇಶ ರಾಜ್ಯಗಳೊಂದಿಗೆ ಚರ್ಚಿಸಲಾಗುವುದು ಎಂದರು.
ರಾಜ್ಯದ ನೀರಿನ ಪಾಲನ್ನು ಪಡೆದುಕೊಳ್ಳುವುದಕ್ಕೆ ನವಲಿ ಜಲಾಶಯ ನಿರ್ಮಾಣವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ. ಇದರಿಂದ ಕಲ್ಯಾಣ ಕರ್ನಾಟಕ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದರು.
ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 27 ಸಾವಿರ ಎಕರೆ ಪ್ರದೇಶಕ್ಕೆ ನೀರು ಸಿಗುತ್ತಿರಲಿಲ್ಲ. ಈ ಭಾಗದ ಜನರು ಶಾಸಕ ಹಂಪನಗೌಡ ಬಾದರ್ಲಿ ಅವರು ಈ ವಿಷಯವನ್ನು ನನ್ನ ಗಮನಕ್ಕೆ ತಂದಿದ್ದರು. ಹಿಂದಿನ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ಡಿ.ಕೆ.ಶಿವಕುಮಾರ ಅವರು ನೀರಾವರಿ ಸಚಿವರಾಗಿದ್ದಾಗ ಈ ಏತ ನೀರಾವರಿ ಯೋಜನೆಗೆ ಅನುದಾನ ನೀಡಲು ಶ್ರಮಿಸಿದ್ದರು ಎಂದು ತಿಳಿಸಿದರು.
ಅಂದು ಅಂದಾಜು 90.60 ಕೋಟಿ ರೂ.ವೆಚ್ಚದ ಈ ಯೋಜನೆಯಡಿ ತುಂಗಭದ್ರಾ ಜಲಾಶಯದಿಂದ ಅಂದಾಜು 1.85 ಟಿಎಂಸಿ ನೀರಿನಿಂದಾಗಿ ಈ ಭಾಗದ ಸಾವಿರಾರು ಎಕರೆ ಪ್ರದೇಶಕ್ಕೆ ನೀರೊದಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ನೀರಾವರಿ ವ್ಯಾಪ್ತಿಯ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಮತ್ತು ಹಿಂದುಳಿದ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಜನರು ಸಹ ನೀರಾವರಿ ಸೌಲಭ್ಯ ಅನುಭವಿಸಬೇಕು. ಈ ಜನರು ಸಹ ಭತ್ತ ಬೆಳೆಯಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ರೈತರ ಜೀವನವನ್ನು ಸುಧಾರಿಸಬೇಕು ಎಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದ್ದ ಕಾರಣಕ್ಕೆ ತಿಮ್ಮಾಪುರ ಏತ ನೀರಾವರಿ ಯೋಜನೆ ಅನುಷ್ಠಾನ ಸಾಧ್ಯವಾಗಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು. ಸಮಾರಂಭದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಶಾಸಕರಾದ ಡಿ.ಎಂ.ನಾಗರಾಜ, ಹಂಪಯ್ಯ ನಾಯಕ, ಆರ್ ಬಸನಗೌಡ ತುರವಿಹಾಳ, ಬಸನಗೌಡ ದದ್ಧಲ್, ಮುಖಂಡರಾದ ಅಮರೇಗೌಡ ಬಯ್ಯಾಪುರ ಸೇರಿದಂತೆ ಇತರರಿದ್ದರು.