ಕೊಡಗಿನಲ್ಲಿ ವನ್ಯಪ್ರಾಣಿಗಳ ಹಾವಳಿ ತಡೆಗೆ ಅಗತ್ಯ ಕ್ರಮ: ಉಮೇಶ್ ಕತ್ತಿ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಪ್ರಾಣಿ-ಮಾನವ ಸಂಘರ್ಷ ಮಿತಿ ಮೀರಿದ್ದು, ಹುಲಿ ಹಾಗೂ ಕಾಡಾನೆಗಳ ನಿರಂತರ ದಾಳಿಯಿಂದ ಜೀವಹಾನಿ, ಬೆಳೆ ಹಾನಿ ಹಾಗೂ ಜಾನುವಾರುಗಳ ಮೇಲಿನ ದಾಳಿಯನ್ನು ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ.ಕತ್ತಿ ಅವರು ತಿಳಿಸಿದರು.
ಮಂಗಳವಾರ ವಿಧಾನ ಪರಿಷತ್ತಿನ ಅಧಿವೇಶನದ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯೆ ವೀಣಾ ಅಚ್ಚಯ್ಯ ಇವರು ನಿಯಮ 72ರಡಿಯಲ್ಲಿ ನೀಡಿರುವ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ 51.37 ಕಿ.ಮೀ ಸೋಲಾರ್ ತಂತಿ ಬೇಲಿ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಅರಣ್ಯದಂಚಿನ ಗ್ರಾಮಗಳಲ್ಲಿನ ಆನೆಗಳು ಕಾಡಿನಿಂದ ನಾಡಿಗೆ ಬರದಂತೆ 45.41 ಕಿ.ಮೀ ಆನೆ ತಡೆ ಕಂದಕ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿದೆ. ಅರಣ್ಯ ಅಂಚಿನ ಗ್ರಾಮಗಳಲ್ಲಿನ ರೈತರಿಗೆ ಸೋಲಾರ್ ಬೇಲಿ ನಿರ್ಮಾಣ ಕೈಗೊಳ್ಳಲು ಅರಣ್ಯ ಇಲಾಖೆಯಿಂದ ಶೇಕಡಾ 50ರಷ್ಟು ಧನ ಸಹಾಯ ನೀಡಲಾಗುತ್ತಿದ್ದು, 2019-20ನೇ ಸಾಲಿನ 4,754 ಕಿ.ಮೀ.ಕಾಮಗಾರಿ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.
ಕಾಡಾನೆಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು 2019-20ನೇ ಸಾಲಿನಲ್ಲಿ 13.42 ಕಿ.ಮೀ ರೈಲ್ವೆ ಹಳಿಗಳ ಬ್ಯಾರಿಕೇಡ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೊಡಗು ಜಿಲ್ಲೆಯ ಅರಣ್ಯ ವೃತ್ತದ ವ್ಯಾಪ್ತಿಯ ವಲಯಗಳಲ್ಲಿ ಕಾಡಾನೆ ಹಾವಳಿಯನ್ನು ತಡೆಯುವ ಸಲುವಾಗಿ 12 ತುರ್ತು ನಿರ್ವಹನೆ ರ್ಯಾಪಿಡ್ ರೆಸ್ಪಾನ್ಸ್ ತಂಡಗಳನ್ನು ರಚಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಆಯ್ದ ವಲಯಗಳಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ 21 ತಂಡ ರಚನೆ ಮಾಡಲಾಗಿದೆ. ಕಾಡಾನೆ ಇರುವಿಕೆ, ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ರೈತರಿಗೆ ಮಾಹಿತಿ ನೀಡುವ ಎಸ್.ಎಂ.ಎಸ್. ಅಲರ್ಟ್ ಸಿಸ್ಟಂ ಕಾರ್ಯ ನಿರ್ವಹಿಸುತ್ತಿದೆ. ವನ್ಯಪ್ರಾಣಿಗಳ ದಾಳಿಯಿಂದ ಬಾಧಿತ ಗ್ರಾಮಗಳ ಜನರೊಂದಿಗೆ ಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.
11 ಕಾಡಾನೆಗಳ ಸ್ಥಳಾಂತರ:. ಕೊಡಗು ಜಿಲ್ಲೆಯಲ್ಲಿ 2014ರಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ 11 ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ 9 ಆನೆಗಳಿಗೆ ರೇಡಿಯೋ ಕಾಲರ್’ಗಳನ್ನು ಅಳವಡಿಸಿ ಅವುಗಳ ಚಲನವಲನಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ನಾಗರಹೊಳೆ ವ್ಯಾಪ್ತಿಯಲ್ಲಿ ರಕ್ಷಣಾ ಕೆಲಸಗಳಿಗಾಗಿ ಎಸ್.ಟಿ.ಪಿ.ಎಫ್ ತಂಡ ನೇಮಕ ಮಾಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರದ ಆದೇಶದನ್ವಯ ಕೊಡಗು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷದಿಂದ ಬಾಧಿತರಾದ ವ್ಯಕ್ತಿಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಬೆಂಬಲ ನೀಡುವುದರ ಜೊತೆಗೆ ಸದರಿ ಉದ್ದೇಶವನ್ನು ಈಡೇರಿಸಲು ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ‘ಕೊಡಗು ಮಾನವ-ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ’ವನ್ನು ವೃತ್ತ ಮಟ್ಟದಲ್ಲಿ ಸ್ಥಾಪಿಸಲಾಗಿದೆ ಎಂದೂ ಸಚಿವರು ಸದನದಲ್ಲಿ ತಿಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!