ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ. ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನ ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು.

