ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರವಾಗಿ ಚುರುಕುಗೊಂಡಿದ್ದು, ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರಬಸ್ತಿಕೇರಿಯಲ್ಲಿ ಅತ್ಯಧಿಕ 121 ಮಿ.ಮೀ. ಹಾಗೂ ಹೊನ್ನಾವರದಲ್ಲಿ ದಾಖಲೆಯ ಪ್ರಮಾಣದ ಮಳೆ ವರದಿಯಾಗಿದೆ.
ಕರಾವಳಿ ಮತ್ತು ಮಲೆನಾಡಿಗೆ ಅಲರ್ಟ್:
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲಿ ಪ್ರವಾಹದ ಆತಂಕ:
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ಮತ್ತು ದೂಧ್‌ಗಂಗಾ ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಜಿಲ್ಲಾಡಳಿತಗಳು ಕಟ್ಟೆಚ್ಚರ ವಹಿಸಿವೆ.
ಬೆಂಗಳೂರು ವಾತಾವರಣ:
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ:
ಮೀನುಗಾರರಿಗೆ ಎಚ್ಚರಿಕೆ:
ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಹೀಗಾಗಿ ಮೀನುಗಾರರು ಮುಂದಿನ ಆದೇಶದವರೆಗೆ ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.



