ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ-ಹೊದಿಕೆ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿರುವ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಆದೇಶವನ್ನು ಸೆ.9ಕ್ಕೆ ಕಾಯ್ದಿರಿಸಿದೆ.
ದರ್ಶನ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಬಳ್ಳಾರಿ ಹಾಗೂ ಬೆಂಗಳೂರಿನ ನಡುವೆ 310 ಕಿ.ಮೀ. ಅಂತರವಿದ್ದು, ಪ್ರತಿ ಬಾರಿ ವಿಚಾರಣೆ ಸಮಯದಲ್ಲಿ ಬಳ್ಳಾರಿಯಿಂದ ಬಂದು ಹೋಗಲು ಸಾಧ್ಯವಿಲ್ಲ. ಆದ್ದರಿಂದ, ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು, ಜಾಮೀನು ರದ್ದುಪಡಿಸಿರುವ ಆದೇಶದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಆರೋಪಿಗಳು ಜೈಲಿನಲ್ಲಿ ತೋರಿರುವ ವರ್ತನೆಗಳನ್ನು ಗಮನಿಸಿದೆ. ಹೀಗಿರುವಾಗ, ಆರೋಪಿಗಳನ್ನು ಸ್ಥಳಾಂತರಿಸಲು ಬೇರೆ ಕಾರಣಗಳ ಅಗತ್ಯವಿಲ್ಲ. ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬೇರೆಡೆಗೆ ಸ್ಥಳಾಂತರಿಸಬಹುದು ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ಹಾಸಿಗೆ-ಹೊದಿಕೆಗೆ ಮನವಿ
ಜೈಲಿನಲ್ಲಿ ನಟ ದರ್ಶನ್ ಅವರಿಗೆ ಹಾಸಿಗೆ, ತಲೆದಿಂಬು, ಹೊದಿಕೆ ನೀಡಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ ದರ್ಶನ್ ಪರ ವಕೀಲರು, ಕಾನೂನು ಪ್ರಕಾರ ಏನು ಕೊಡಬೇಕೋ ಅದನ್ನು ಕೊಡಲಿ, ವಿಚಾರಣಾಧೀನ ಕೈದಿಗೆ ನೀಡಬಹುದಾದ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವಂತೆ ಕೇಳುತ್ತಿದ್ದೇವೆ. ಯಾವ ಕಾನೂನಿನ ಅಡಿ ಕೊಡಲಾಗುವುದಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದರು.
ಎರಡು ಅರ್ಜಿಗಳಲ್ಲಿ ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆದೇಶವನ್ನು ಸೆ.9ಕ್ಕೆ ಕಾಯ್ದಿರಿಸಿದೆ.