ಹಿರಿಯ ನಟಿ ಲೀಲಾವತಿ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ ಸಹಿತ ರಾಜಕೀಯ ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ.
ಅವರಿಗೆ 87 ವರ್ಷ ವಯಸ್ಸಾಗಿತ್ತು. ತಾಯಿಯ ನಿಧನವನ್ನು ಪುತ್ರ ವಿನೋದ್​ ರಾಜ್​ ಖಚಿತಪಡಿಸಿದ್ದಾರೆ. ಲೀಲಾವತಿ ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್​ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ.

ಡಿ.ಕೆ.ಶಿವಕುಮಾರ್​ ಸಂತಾಪ
ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ. ಓಂ ಶಾಂತಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸಂತಾಪ ಸೂಚಿಸಿದ್ದಾರೆ.

ಪ್ರತಿಪಕ್ಷ ನಾಯಕ ಆರ್​.ಅಶೋಕ್
ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ಬಹುಭಾಷಾ ನಟಿ ಲೀಲಾವತಿ ನಿಧನರಾಗಿದ್ದು ಅತ್ಯಂತ ದುಃಖ‌ ತಂದಿದೆ. ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು, ಅವರ ಆತ್ಮಕ್ಕೆ ಚಿರಶಾಂತಿ‌ಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್​.ಅಶೋಕ್​ ಶೋಕ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ 
ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!