ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದು ನೂರು ದಿನಗಳು ಕಳೆದಿದ್ದು, ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ರಾಜ್ಯ ಸರ್ಕಾರದ ವೈಫಲ್ಯ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ಕಾವೇರಲಿದೆ.
ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಗಮನಹರಿಸದ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿಯೇ ಮುಳುಗಿದೆ. ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಆದರೆ ಈ ಬಗ್ಗೆ ಸರ್ಕಾರಕ್ಕೆ ಎಲ್ಲ ಮಾಹಿತಿ ಇದ್ದರೂ ಯಾವುದೇ ಕ್ರಮಕ್ಕೆ ಈವರೆಗೂ ಮುಂದಾಗಿಲ್ಲ.
ಬಿಜೆಪಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿದ್ದವು. ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಬದಲು ಯೋಜನೆಗಳನ್ನು ತಡೆಹಿಡಿಯಲಾಗಿದೆ. ಇದು ರೈತ ಹಾಗೂ ಬಡವರ ವಿರೋಧಿ ಸರ್ಕಾರವಾಗಿದೆ. ಈ ಕಡೆಯಿಂದ ಉಚಿತವಾಗಿ ಅಕ್ಕಿ ನೀಡಿ, ಆ ಕಡೆಯಿಂದ ಬೇರೆ ವಸ್ತುಗಳ ಬೆಲೆ ಹೆಚ್ಚಳ ಮಾಡಿದೆ.
ಬಿಜೆಪಿ ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ, ತಮ್ಮ ಸಮಯವನ್ನು ದ್ವೇಷ ಸಾಧಿಸುವಲ್ಲಿ ವ್ಯರ್ಥ ಮಾಡುತ್ತಿದೆ. ಈ ಎಲ್ಲಾ ವೈಫಲ್ಯಗಳನ್ನು ಬಿಜೆಪಿ ಖಂಡಿಸಿದ್ದು, ಇಂದು ಬೃಹತ್ ಪ್ರತಿಭಟನೆ ನಡೆಸಲಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಒಟ್ಟಾರೆ ೧೫ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.