ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ‘ಆಟೊಮೇಟೆಡ್ ಎಕ್ಸ್‌ಟರ್ನಲ್ ಡಿಫೈಬ್ರಿಲ್ಲೇಟರ್ಸ್ (ಎಇಡಿ)’ ಸಾಧನ ಅಳವಡಿಸುವ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಕುರಿತ ವಿಧಾನ ಪರಿಷತ್ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಪ್ರಕರಣಗಳು ಸಾಮಾನ್ಯವಾಗಿ ಮಧುಮೇಹ, ಬಿಪಿ, ಮಾಲಿನ್ಯ, ಒತ್ತಡ, ಬೊಜ್ಜು ಮತ್ತು ಜಡ ಜೀವನಶೈಲಿಗೆ ಸಂಬಂಧಿಸಿದ್ದಾಗಿರುತ್ತವೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಲಕ್ಷಣಗಳನ್ನು ಹೊಂದಿರುವವರನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆಗಳನ್ನು ನಿವಾರಿಸಲು ಅವರಿಗೆ ಔಷಧಿಗಳನ್ನು ನೀಡಲಾಗುವುದು ಎಂದು ಹೇಳಿದರು.
ಹೃದಯ ಜ್ಯೋತಿ ಯೋಜನೆಯಡಿ, ರಾಜ್ಯಾದ್ಯಂತ ಟೆಲಿ ಇಸಿಜಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.