ಅಫ್ಘಾನ್ ನಾಯಕನ ಜವಾಬ್ದಾರಿ ಆಟ: ಟೀಮ್ ಇಂಡಿಯಾ ಗೆಲುವಿಗೆ ಸವಾಲಿನ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಶ್ಮತುಲ್ಲಾ ಶಾಹಿದಿ ಹಾಗೂ ಅಜ್ಮತುಲ್ಲಾ ಒಮರ್‌ಝೈ ಆಕರ್ಷಕ ಅರ್ಧಶತಕಗಳ ನೆರವಿನಿಂದ ಆಫ್ಘಾನಿಸ್ತಾನ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 272 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ ತಂಡದ ನಾಯಕ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು.

ಇಬ್ರಾಹಿಂ ಜದ್ರಾನ್ 22 ರನ್ ಬಾರಿಸಿ ರಾಹುಲ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಗುರ್ಬಾಜ್ ಅವರಿಗೆ ಹಾರ್ದಿಕ್ ಪಾಂಡ್ಯ ಪೆವಿಲಿಯನ್ ಹಾದಿ ತೋರಿಸಿದರು. ರೆಹಮತ್ ಶಾ 16 ರನ್ ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು.

ಕೇವಲ 63 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆಫ್ಘಾನಿಸ್ತಾನ ತಂಡಕ್ಕೆ ನಾಯಕ ಹಶ್ಮತುಲ್ಲಾ ಶಾಹಿದಿ ಹಾಗೂ ಅಜ್ಮತುಲ್ಲಾ ಒಮರ್‌ಝೈ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 4ನೇ ವಿಕೆಟ್‌ಗೆ ಈ ಜೋಡಿ 128 ಎಸೆತಗಳನ್ನು ಎದುರಿಸಿ 121 ರನ್‌ಗಳ ಜತೆಯಾಟ ನಿಭಾಯಿಸಿತು.

88 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 80 ರನ್ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿದ್ದ ಶಾಹಿದಿಯನ್ನು ಕುಲ್ದೀಪ್ ಎಲ್‌ಬಿ ಬಲೆಗೆ ಕೆಡಹುವಲ್ಲಿ ಯಶಸ್ವಿಯಾದರು. ಇನ್ನು ಇದರ ಬೆನ್ನಲ್ಲೇ ಒಮರ್‌ಝೈ 62 ರನ್ ಬಾರಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಇನ್ನುಳಿದಂತೆ ಕೊನೆಯಲ್ಲ ಮೊಹಮ್ಮದ್ ನಬಿ(19), ರಶೀದ್ ಖಾನ್(16) ಹಾಗೂ ಮುಜೀಬ್ ಉರ್ ರೆಹಮಾನ್(10*) ಉಪಯುಕ್ತ ರನ್ ಕಾಣಿಕೆ ನೀಡುವ ಮೂಲಕ ಆಫ್ಘಾನಿಸ್ತಾನ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!