ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿ ಬಾರಿಸಿದ ಸಮಯೋಚಿತ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಬಾರಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಗುರಿ ನೀಡಿದೆ.
ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಸ್ಪೋಟಕ ಆರಂಭವನ್ನೇ ಪಡೆಯಿತು. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಮೊದಲ ವಿಕೆಟ್‌ಗೆ ಕೇವಲ 5.5 ಓವರ್‌ಗಳಲ್ಲಿ 62 ರನ್‌ಗಳ ಜತೆಯಾಟವಾಡುವ ಮೂಲಕ ಸ್ಪೋಟಕ ಆರಂಭ ಒದಗಿಸಿಕೊಟ್ಟರು.
ರೋಹಿತ್ ಶರ್ಮಾ ಕೇವಲ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 40 ರನ್ ಬಾರಿಸಿ ಕಗಿಸೋ ರಬಾಡಗೆ ವಿಕೆಟ್ ಒಪ್ಪಿಸಿದರು. ಗಿಲ್ 23 ರನ್ ಬಾರಿಸಿ ಕೇಶವ್ ಮಹಾರಾಜ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
ಮೂರನೇ ವಿಕೆಟ್‌ಗೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾದರು. ಈ ಜೋಡಿ 158 ಎಸೆತಗಳನ್ನು ಎದುರಿಸಿ 134 ರನ್‌ಗಳ ಜತೆಯಾಟವಾಡಿತು. ಶ್ರೇಯಸ್ ಅಯ್ಯರ್ 87 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 77 ರನ್ ಸಿಡಿಸಿ ಲುಂಗಿ ಎಂಗಿಡಿಗೆ ವಿಕೆಟ್ ಒಪ್ಪಿಸಿದರು.
ಇತ್ತ ಇಂದು 35ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ ಸಮಯೋಚಿತ ಶತಕ ಸಿಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸ್ಮರಣೀಯವಾಗಿಸಿಕೊಂಡರು. ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸುವ ಮೂಲಕ ದಶಕಗಳ ಕಾಲ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಗರಿಷ್ಠ ಏಕದಿನ ಶತಕದ ಸಾಧನೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾದರು.
ಇನ್ನುಳಿದಂತೆ ಕೊನೆಯಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 14 ಎಸೆತಗಳಲ್ಲಿ 22 ರನ್ ಸಿಡಿಸಿದರೆ, ಆಲ್ರೌಂಡರ್ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 29 ರನ್ ಬಾರಿಸಿ ತಂಡ ಕಠಿಣ ಮೊತ್ತ ಕಲೆಹಾಕಲು ನೆರವಾದರು.