‘ಚಾಣಕ್ಯ’ ಶಾ ರಾಜ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ನಾಳಿನ ಸಿಎಂ ಲಂಚ್ ಮೀಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ರಾಜ್ಯ ರಾಜಕೀಯ ವಿದ್ಯಮಾನಗಳು ಹಾಗು ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಹೀಗಾಗಿ ಈ ಭೇಟಿ ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಇಂದು ರಾತ್ರಿ 11 ಗಂಟೆಗೆ ಭಾರತೀಯ ವಾಯುಪಡೆ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ಪ್ರಮುಖ ನಾಯಕರು ಅಮಿತ್ ಶಾ ಅವರನ್ನು ಸ್ವಾಗತಿಸಲಿದ್ದಾರೆ.

ಬಳಿಕ11.30ಕ್ಕೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​ಗೆ ತೆರಳರುವ ಅಮಿತ್ ಶಾ ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 11 ರಿಂದ 12.30 ರವರೆಗೆ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆಯಿಂದ ನಡೆಯಲಿರುವ ಸಂಕಲ್ಪ ಸಿದ್ದಿ ಸಮಾವೇಶದ ಮೂರನೇ ಆವೃತ್ತಿಯಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಮಧ್ಯಾಹ್ನ 1 ರಿಂದ 2 ಗಂಟೆವರೆಗೆ ಭೋಜನಕ್ಕಾಗಿ ಸಮಯವನ್ನು ಕಾಯ್ದಿರಿಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಲಂಚ್ ಮೀಟಿಂಗ್​ ನಡೆಸಲಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣ ಕುರಿತು ವಿಸ್ತೃತವಾದ ಮಾತುಕತೆ ನಡೆಸಲಿದ್ದಾರೆ. ಸ್ವಪಕ್ಷೀಯ ಕಾರ್ಯಕರ್ತರೇ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆ ಅಮಿತ್ ಶಾ ಖುದ್ದಾಗಿ ಈ ವಿಷಯದಲ್ಲಿ ರಂಗಪ್ರವೇಶ ಮಾಡಿ ಕಾರ್ಯಕರ್ತರನ್ನು ಸಮಾಧಾನ ಪಡಿಸಲಿದ್ದಾರೆ ಎನ್ನುವ ಕಾರಣದಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.

ಲಂಚ್ ಮೀಟ್ ಮುಗಿಸಿದ ನಂತರ 2.30 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ನವದೆಹಲಿಗೆ ಅಮಿತ್ ಶಾ ವಾಪಸಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here