ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದ ರಾಷ್ಟ್ರೀಯ ಬಿಜೆಪಿ ನಾಯಕತ್ವವು ರಾಜ್ಯ ಬಿಜೆಪಿ ನಾಯಕರಿಗೆ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ತಡರಾತ್ರಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಘಟಕದ ನಾಯಕರಿಗೆ ಚುನಾವಣೆಗೆ ತಯಾರಿ ನಡೆಸುವಂತೆ ಸೂಚಿಸಿದರು. ಎಲ್ಲಾ 90 ಸ್ಥಾನಗಳಲ್ಲೂ ಪಕ್ಷ ಸ್ಪರ್ಧಿಸಲಿದೆ ಎಂದು ಹೈಕಮಾಂಡ್ ಹೇಳಿದೆ.
ಚುನಾವಣೆಗೂ ಮುನ್ನ ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ನಾಯಕತ್ವ ರಾಜ್ಯ ನಾಯಕರಿಗೆ ತಿಳಿಸಿದೆ. ಆದಾಗ್ಯೂ, ಸಮಾನ ಮನಸ್ಕ ಪಕ್ಷಗಳೊಂದಿಗೆ ಚುನಾವಣಾ ಒಪ್ಪಂದಗಳನ್ನು ತೀರ್ಮಾನಿಸಬಹುದು. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷವು ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಂಬಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.