ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸ ದಿಗಂತ ವರದಿ, ಶಿವಮೊಗ್ಗ :
ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿ ಮಾತನಾಡಿದರು.
ಆಕ್ಸಿಜನ್ ಹಾಗೂ ಬೆಡ್ ಗಳ ಲಭ್ಯತೆ, ರೆಮಿಡೆಸಿಯ್ ಅಗತ್ಯ ಪೂರೈಕೆ ಮೇಲೆ ನಿಗಾ ವಹಿಸಬೇಕು. ಹೋಂ ಐಸೋಲೇಷನ್ ಇರುವವರನ್ನು ಪ್ರತಿದಿನ ಕನಿಷ್ಟ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು. ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕರೋನಾ ಪರೀಕ್ಷೆ ನಡೆಸಬೇಕು. ಸೋಂಕಿತರ ಸಂಪರ್ಕಿತರನ್ನು ಗುರುತಿಸುವ ಕಾರ್ಯವನ್ನು ಸಮರ್ಪಕವಾಗಿ ನಡೆಸಬೇಕು ಎಂದು ಹೇಳಿದರು.
ಲಸಿಕೆ ಪಡೆಯಲು ಬರುವವರಿಗೆ ಲಸಿಕೆ ಲಭ್ಯವಿಲ್ಲದಿದ್ದರೆ ನೀಡುವ ದಿನಾಂಕದ ಬಗ್ಗೆ ಸರಿಯಾಗಿ ಮಾಹಿತಿ ನೀಡಬೇಕು. ಲಸಿಕೆ ನೀಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಸ್ಯಾನಿಟೈಸ್ ಮಾಡುವ ಕಾರ್ಯವನ್ನು ನಡೆಸಬೇಕು ಎಂದು ಹೇಳಿದರು.