ಹೊಸದಿಗಂತ ವರದಿ, ಅಂಕೋಲಾ:
ವೃಕ್ಷಮಾತೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಹಾಲಕ್ಕಿ ಮಹಿಳೆ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಲಾಗಿದೆ.
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕೃಷಿ ವಿಶ್ವವಿದ್ಯಾಲಯದ 36 ನೇ ಘಟಿಕೋತ್ಸವದ ಸಂದರ್ಭದಲ್ಲಿ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರೂ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೂ ಆದ ಥಾವರಚಂದ ಗೆಹ್ಲೋಟ್ ಅವರು ಸೂಚಿಸಿದ್ದು ಜೂನ್ 16 ರಂದು ಬೆಳಿಗ್ಗೆ 11 ಘಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು.
ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೃಷ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ.ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ.ಪಿ.ಎಲ್. ಪಾಟೀಲ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲ ಸಚಿವರ ಕಾರ್ಯಾಲಯದಿಂದ ಪದ್ಮಶ್ರೀ ತುಳಸಿ ಗೌಡ ಅವರಿಗೆ ರವಾನಿಸಿರುವ ಆಹ್ವಾನ ಪತ್ರದಲ್ಲಿ ತಿಳಿಸಲಾಗಿದೆ.