Tuesday, November 25, 2025

ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆ: ವರ್ಕ್ ಫ್ರಂ ಹೋಮ್‌ಗೆ ಶಿಫಾರಸು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದೆ.

ನಿನ್ನೆಯಷ್ಟೇ 373 ರಷ್ಟಿದ್ದ ವಾಯುಗುಣಮಟ್ಟ ಇಂದು 360ಕ್ಕೆ ತಲುಪಿದ್ದು, ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಹೀಗಾಗಿ ಸ್ವಲ್ಪ ಸಮಯ ರಾಜಧಾನಿಯನ್ನ ತೊರೆಯುವುದು ಅಥವಾ ಮನೆಯಲ್ಲಿಯೇ ಇರುವುದು ಉತ್ತಮ ಎಂದು ತಜ್ಞರು ಹೇಳಿದ್ದಾರೆ.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (CAQM) ದೆಹಲಿ-ಎನ್‌ಸಿಆರ್‌ನಾದ್ಯಂತ 3ನೇ ಹಂತದ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (GRAP-3)ಯ ಕ್ರಮಗಳನ್ನು ಜಾರಿಗೊಳಿಸಿದೆ.

GRAP-3 ನಿಯಮದ ಅನ್ವಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಪುರಸಭೆಯ ಕಚೇರಿಗಳಲ್ಲಿ 50% ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸುವಂತೆ ಶಿಫಾರಸು ಮಾಡಲಾಗಿದೆ. ಆದ್ರೆ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗಿಗಳು ಸಂಪೂರ್ಣ ಮನೆಯಿಂದಲೇ ಕೆಲಸ ಮಾಡುವಂತೆ ಕ್ರಮ ವಹಿಸಲು ಸಲಹೆ ಕೊಟ್ಟಿದೆ. ಒಂದು ವೇಳೆ ವಾಯುಗುಣಮಟ್ಟ ಇನ್ನೂ ಕಳಪೆ ಮಟ್ಟಕ್ಕೆ ಕುಸಿದರೆ ಗ್ರಾಪ್‌-4 ನಿಯಮಗಳನ್ನ ಜಾರಿಗೊಳಿಸುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಸರ್ಕಾರಕ್ಕೆ ಸಲಹೆ ನೀಡಿದೆ.

ಇನ್ನೂ ದೆಹಲಿಯಲ್ಲಿ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಈಗಾಗಲೇ ದೆಹಲಿ ಸರ್ಕಾರ ಶಾಲೆಗಳು ಹೊರಾಂಗಣ ಚಟುವಟಿಕೆಗಳು ಹಾಗೂ ಕ್ರೀಡೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.

error: Content is protected !!