ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ವರದಿ,ಕಾಸರಗೋಡು:
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ವಾಯುಭಾರ ಕುಸಿತವು ಮತ್ತಷ್ಟು ಪ್ರಬಲಗೊಂಡಿದೆ. ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುವ ಬಗ್ಗೆ ತಿರುವನಂತಪುರದ ಕೇಂದ್ರ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ತಿರುವನಂತಪುರವನ್ನು ಹೊರತುಪಡಿಸಿ ಕಾಸರಗೋಡು ಸೇರಿದಂತೆ ರಾಜ್ಯದ ಇತರ ಎಲ್ಲ 13 ಜಿಲ್ಲೆಗಳಲ್ಲಿ ಸೆ.16ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕಾಸರಗೋಡು ಸಹಿತ ಉತ್ತರ ಮತ್ತು ಮಧ್ಯ ಕೇರಳದಲ್ಲಿ ಮುಂದಿನ ಎರಡು ದಿನಗಳ ಕಾಲ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಚುರುಕಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
ಸೆ.16ರ ತನಕ ಅರಬ್ಬೀ ಸಮುದ್ರದ ನೈಋತ್ಯ ಮತ್ತು ಮಧ್ಯ ಪಶ್ಚಿಮ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಮಾರುತಗಳು ಗಂಟೆಗೆ 40-50 ಕಿಮೀ ಮತ್ತು ಕೆಲವು ಸಂದರ್ಭಗಳಲ್ಲಿ 60 ಕಿಮೀ ವೇಗದಲ್ಲಿರುತ್ತವೆ. ಆದ್ದರಿಂದ ರಾಜ್ಯದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.