ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿ ಅಕ್ವಾನ್ ಚಂಡಮಾರುತದ ಪ್ರಭಾವ ಮುಂದುವರಿದಿದ್ದು, ನಾಳೆ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಕ್ವಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಚಂಡಮಾರುತದ ಪರಿಣಾಮ ಮೂರು ರೈಲುಗಳ ಸಂಚಾರ ವೇಳಾಪಟ್ಟಿಯಲ್ಲಿ ಬದಲಾವಣೆ ಸಹ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ದಾಖಲೆಯ ಚಳಿಯ ವಾತಾವರಣವಿದೆ. ಇದರ ಬೆನ್ನಲ್ಲೇ ಮಳೆ ಸುರಿದರೆ ಜನ ಜೀವನ ಹೈರಾಣಾಗುವ ಸಾಧ್ಯತೆ ಇದೆ.
ಶುಕ್ರವಾರ ಮಧ್ಯಾಹ್ನ ಆಂಧ್ರಪ್ರದೇಶದ ನರಸಾಪುರ ಮತ್ತು ಒಡಿಶಾದ ಪುರಿ ನಡುವಿನ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಗಂಟೆಗೆ 90 – 100 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗಾಳಿಯ ವೇಗ 110 ಕಿ.ಮೀ. ತಲುಪುವ ಸಾಧ್ಯತೆ ಸಹ ಇದೆ. ಒಡಿಶಾದಲ್ಲಿ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, 13 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.



