ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಹಾದಿ ತಪ್ಪಿಸುತ್ತಿದ್ದು, ಇದೀಗ ಇದೇ ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿತು.
ಬೆಳಗಾವಿಯಲ್ಲಿ ನಡೆದ ಎರಡನೇ ಹಂತದ ಜನಕ್ರೋಶ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಯಾವುದೇ ಉದ್ಯಮಿ ಮಾಡದಷ್ಟು ದೊಡ್ಡ ಸಾಧನೆಯನ್ನು ಕಾಂಗ್ರೆಸ್ ನಾಯಕರು ಮಾಡಿದ್ದಾರೆ. ಯಂಗ್ ಇಂಡಿಯಾ ಟ್ರಸ್ಟ್ ಮೂಲಕ ದೊಡ್ಡ ಹಗರಣ ನಡೆಸಿರುವುದು ಬೆಳಕಿಗೆ ಬಂದಿದೆ. ದೊಡ್ಡ ಹಗರಣ ಮಾಡುವುದೇ ಕಾಂಗ್ರೆಸ್‌ನ ಅಭಿವೃದ್ಧಿ ಮಾದರಿಯಾಗಿದೆ ಎಂದು ವ್ಯಂಗ್ಯವಾಡಿದರು.
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ವ್ಯಾಸಂಗಕ್ಕೆ ವರ್ಷಕ್ಕೆ 30 ಲಕ್ಷ ರೂ ನೆರವು ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ನಿಲುವು ಹೊಂದಿದೆ. ಹಿಂದುಗಳಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯಗೆ ಹಿಂದುಗಳು ತಕ್ಕ ಉತ್ತರ ನೀಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ, 50ಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಜನ ಅನುಭವಿಸುತ್ತಿರುವ ತೊಂದರೆ ಬೆಳಕಿಗೆ ತರಲು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.