ಸರ್ವ ಪಕ್ಷಗಳ ಸಭೆ: ಫೆ 1 ರಂದು ಕೇಂದ್ರ ಬಜೆಟ್ ಮಂಡನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜನವರಿ 31ರಿಂದ ಬಜೆಟ್ ಅಧಿವೇಶನ (Budget Session 2023) ಆರಂಭವಾಗಲಿದ್ದು,, ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆಯನ್ನು ಸೋಮವಾರ ದಿಲ್ಲಿಯಲ್ಲಿ ಆಯೋಜಿಸಲಾಗಿತ್ತು.ಈ ಸಭೆಯಲ್ಲಿ 27 ಪಕ್ಷಗಳ 37 ನಾಯಕರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಅಧಿವೇಶನದ ಮೊದಲ ದಿನವೇ ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದರು.2023 – 24 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಬಳಿಕ ರಾಜ್ಯಸಭೆಯಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಗುರುವಾರದಿಂದ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭವಾಗಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಉತ್ತರಿಸಲಿದ್ದಾರೆ. ವಂದನಾ ನಿರ್ಣಯ ಹಾಗೂ ಪ್ರಧಾನಿ ಅವರ ಉತ್ತರ ಸೇರಿದಂತೆ ಅಧಿವೇಶನದ ಮೊದಲ ಭಾಗದ ಕಾರ್ಯ ಕಲಾಪಗಳು ಫೆಬ್ರವರಿ 13 ರ ವರೆಗೂ ನಡೆಯಲಿವೆ.

ಮಧ್ಯ ವಿರಾಮದ ಬಳಿಕ ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 13 ರಂದು ಪ್ರಾರಂಭವಾಗಿ ಏಪ್ರಿಲ್ 6 ರವರೆಗೆ ನಡೆಯಲಿದೆ. ವಿವಿಧ ಸಚಿವಾಲಯಗಳಿಗೆ ಅನುದಾನಕ್ಕಾಗಿ ಬೇಡಿಕೆಯ ಕುರಿತು ಚರ್ಚೆ ನಡೆಯಲಿದ್ದು, ಕೇಂದ್ರ ಬಜೆಟ್ ಅನ್ನು ಅಂಗೀಕರಿಸುವ ಕಾರ್ಯಕಲಾಪಗಳು ನಡೆಯಲಿವೆ. ಅಲ್ಲದೇ ಇತರ ಶಾಸಕಾಂಗದ ವ್ಯವಹಾರಗಳು, ವಿಧೇಯಕಗಳ ಮೇಲಿನ ಚರ್ಚೆಯನ್ನೂ ಸಹ ಸರ್ಕಾರವು ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಸರ್ವ ಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಪಿಯೂಷ್ ಗೋಯಲ್, ಅರ್ಜುನ, ರಾಮ್ ಮೇಘವಾಲ್ ಮತ್ತು ವಿ ಮುರಳೀಧರನ್ ಸೇರಿದಂತೆ 27 ಪಕ್ಷದ 37 ನಾಯಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!