ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದ ಮಹತ್ವದ ಕ್ಷಣಗಳಿಗೆ ಸಾಕ್ಷಿಯಾಗುವ ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ನಗರ ಸಕಲ ರೀತಿಯಲ್ಲಿ ಸಜ್ಜಾಗಿದೆ. ವಿಧಾನಸಭೆ ಹಾಗೂ ವಿಧಾನಪರಿಷತ್ ಅಧಿವೇಶನ ಸುಗಮವಾಗಿ ನಡೆಯುವಂತೆ ಜಿಲ್ಲಾಡಳಿತ ವ್ಯಾಪಕ ವ್ಯವಸ್ಥೆಗಳನ್ನು ಪೂರ್ಣಗೊಳಿಸಿದೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಅಗತ್ಯವಿರುವ ವಸತಿ ಮತ್ತು ಊಟ ವ್ಯವಸ್ಥೆ ಈಗಾಗಲೇ ಮಾಡಲಾಗಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಕೊಠಡಿಗಳನ್ನು ವಿವಿಧ ಹೋಟೆಲ್‌ಗಳು ಮತ್ತು ವಸತಿಗೃಹಗಳಲ್ಲಿ ಬುಕ್ ಮಾಡಲಾಗಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಅತಿಥಿಗೃಹದಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ.
ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ನಗರ ಹಾಗೂ ಸುವರ್ಣಸೌಧದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಜಾಗ್ರತೆಯ ಸೂಚನೆ ನೀಡಿರುವುದರಿಂದ ಹೈಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ನಗರದಲ್ಲಿ ಹೆಚ್ಚುವರಿಯಾಗಿ ಆರು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಎಸ್ಪಿ ದರ್ಜೆಯ ಅಧಿಕಾರಿಗಳು, ಹಿರಿಯ ಪೊಲೀಸ್ ಸಿಬ್ಬಂದಿ, ಹೋಂಗಾರ್ಡ್ಸ್, ಕೆಎಸ್‌ಆರ್‌ಪಿ ತುಕಡಿಗಳು, ಕ್ಷಿಪ್ರ ಕಾರ್ಯಪಡೆ ಸೇರಿದಂತೆ ವಿವಿಧ ವಿಶೇಷ ದಳಗಳು ಕರ್ತವ್ಯಕ್ಕೆ ತೊಡಗಿವೆ. ಸುವರ್ಣಸೌಧದ ಸುತ್ತ ಪೊಲೀಸ್ ಸರ್ಪಗಾವಲು ಇರಲಿದ್ದು, ಪ್ರತಿಭಟನೆಗಳಿಗೆ ನಿಗದಿತ ಸ್ಥಳಗಳನ್ನು ಮಾತ್ರ ಅನುಮತಿಸಲಾಗಿದೆ. ಇದರೊಂದಿಗೆ ಅಧಿವೇಶನ ಶಾಂತಿಯುತವಾಗಿ ನಡೆಯಲು ಆಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

