September 16, 2026
Wednesday, September 16, 2026
spot_img

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದ್ವಿಪೌರತ್ವ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆದೇಶಿಸಿದೆ.

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಲಕ್ನೋದ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಡೆಸಿದ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು, ರಾಹುಲ್ ಗಾಂಧಿ ಅವರ ದ್ವಿಪೌರತ್ವದ ಆರೋಪವು ತನಿಖೆಗೆ ಅರ್ಹವಾಗಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ.

ಜೊತೆಗೆ ಉತ್ತರ ಪ್ರದೇಶ ಸರ್ಕಾರವು ಈ ಬಗ್ಗೆ ಸ್ವತಃ ತನಿಖೆ ನಡೆಸಬೇಕು ಇಲ್ಲವೇ ಕೇಂದ್ರೀಯ ಸಂಸ್ಥೆಗೆ ತನಿಖೆಗೆ ವಹಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ನಿರ್ದೇಶಿಸಿದೆ.

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಸಾಬೀತುಪಡಿಸುವ ದಾಖಲೆಗಳು ಮತ್ತು ಬ್ರಿಟಿಷ್ ಸರ್ಕಾರದ ಇಮೇಲ್‌ಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರರು ಹೇಳಿಕೊಂಡಿದ್ದು, ಈ ಹಿನ್ನೆಲೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಗೂ ಅನರ್ಹರು ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಸಂಬಂಧ ಪೌರತ್ವ, ಪಾಸ್‌ಪೋರ್ಟ್‌ಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಾನೂನುಗಳು ಸೇರಿದಂತೆ ವಿವಿಧ ಕಾನೂನು ನಿಬಂಧನೆಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅರ್ಜಿ ಸಲ್ಲಿಸಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !