ಹೊಸದಿಗಂತ ವರದಿ ಬೆಳಗಾವಿ:
ನಗರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಿನ್ನೆ ರಾತ್ರಿ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ದಲಿತ ಮುಖಂಡ ಮಲ್ಲೇಶ್ ಚೌಗಲೆ ನೇತ್ರತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿದರು.
ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ಎಸ್ಪಿ ರಾಮ್ ರಾಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪಾಲಿಕೆ ಎಂಜಿನಿಯರ್ಗಳು ಸ್ಥಳ ಪರಿಶೀಲನೆ ನಡೆಸಿ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದರು.
ದಲಿತ ಮುಖಂಡ ಮಲ್ಲೇಶ್ ಚೌಗುಲೆ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:
ಉದ್ಯಾನದ ಭದ್ರತೆ ಬಲಪಡಿಸಲು 24 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು, ಕಾವಲುಗಾರರನ್ನು ನೇಮಿಸಬೇಕು ಹಾಗೂ ಕೆಟ್ಟುಹೋಗಿರುವ ವಿದ್ಯುತ್ ದೀಪಗಳನ್ನು ದುರಸ್ತಿಪಡಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಘಟನೆಯ ಸಮಗ್ರ ತನಿಖೆ ಮತ್ತು ಸೂಕ್ತ ಭದ್ರತಾ ಕ್ರಮಗಳಿಗೆ ಒತ್ತಾಯಿಸಿದರು.



