NEET ಪರೀಕ್ಷೆಯಲ್ಲಿ ಅಕ್ರಮ ಆರೋಪ: 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET 2024) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.ಹೀಗಾಗಿ ಕೇಂದ್ರ ಸರ್ಕಾರವು ಗ್ರೇಸ್‌ ಮಾರ್ಕ್ಸ್‌ (NEET Grace Marks) ಪಡೆದ 1,500 ವಿದ್ಯಾರ್ಥಿಗಳ ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶನಿವಾರ ಮಾಹಿತಿ ನೀಡಿದೆ.

ನೀಟ್‌ ಬರೆದ ಅಭ್ಯರ್ಥಿಗಳಿಗೆ ರ‍್ಯಾಂಕ್‌ ನೀಡುವ ಮಾನದಂಡಕ್ಕೆ ಗ್ರೇಸ್‌ ಮಾರ್ಕ್ಸ್‌ ನೀಡಿರುವುದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆದರೂ, ಗ್ರೇಸ್‌ ಮಾರ್ಕ್ಸ್‌ ಪಡೆದವರ ಉತ್ತರ ಪತ್ರಿಕೆಗಳನ್ನು ಮತ್ತೆ ಮೌಲ್ಯಮಾಪನ ಮಾಡಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯವು ಈ ಕುರಿತು ಸಮಿತಿಯೊಂದನ್ನು ರಚಿಸಿದೆ. ಮರು ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂಬುದಾಗಿ ಎನ್‌ಟಿಎ ಮಹಾ ನಿರ್ದೇಶಕ ಸುಬೋಧ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಜೊತೆಗೆ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?
ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನೀಟ್‌ ಅಕ್ರಮದ ಕುರಿತು ತನಿಖೆಗೆ ಆಗ್ರಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!