ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ವರದಿ ಸಲ್ಲಿಕೆ ಆಗಿದೆ.
ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ ನೇತೃತ್ವದ ಆಯೋಗ ತನಿಖಾ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್‌ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು.