ಹೊಸದಿಗಂತ ವರದಿ ಚಿತ್ರದುರ್ಗ:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮದ ಆರೋಪ ಖಂಡಿಸಿ ಬಿಜೆಪಿ ಹೊಳಲ್ಕೆರೆ ಮಂಡಲದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರಿಯಿತು. ಈ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಮುಖಂಡರು ಆಗ್ರಹಿಸಿದರು.
ಬಿಜೆಪಿ ಉಪಾಧ್ಯಕ್ಷ ಡಾ. ಸಿದ್ದಾರ್ಥ ಗುಂಡಾರ್ಪಿ ಮಾತನಾಡಿ, ಅಕ್ರಮದ ಆರೋಪ ಎದುರಿಸುತ್ತಿರುವ ಹಾಗೂ ಜಾಮೀನಿನ ಮೇಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ನೈತಿಕತೆಯ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು 187 ಕೋಟಿ ರೂ ಹಣದ ಅಕ್ರಮದ ಕುರಿತು ಸಮಗ್ರ ತನಿಖೆ ನಡೆಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಬಿ. ನಾಗೇಂದ್ರ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಎಂದು ಅವರು ಆಗ್ರಹಿಸಿದರು.
ಇದನ್ನೂ ಓದಿ:
ಹೊಳಲ್ಕೆರೆ ಮಂಡಲ ಅಧ್ಯಕ್ಷ ಡಿ.ಬಿ. ಕುಮಾರ್ ಮಾತನಾಡಿ, ನಾಗೇಂದ್ರ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಹೋರಾಟ ಮುಂದುವರಿಯಲಿದೆ. ಅವರು ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದರು. ಸುಮಾರು 15ರಿಂದ 20 ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಹೊಳಲ್ಕೆರೆ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಚಿತ್ರಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ರೇವಂತ ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರುಣ್, ಬಸವಂತಪ್ಪ, ಪ್ರತಾಪ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



