ಪ್ರಾಣಪ್ರತಿಷ್ಠೆ ಕಾರ್ಯ ವೀಕ್ಷಿಸಲು ಅವಕಾಶ ಕೊಡಿ: ರಜೆ ಘೋಷಣೆಗೆ ವಿಜಯೇಂದ್ರ ಒತ್ತಾಯ

ಹೊಸದಿಗಂತ ವರದಿ ಬೆಂಗಳೂರು:

ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯವನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲು ಜನವರಿ 22ರಂದು ರಾಜ್ಯದ ಕಾಂಗ್ರೆಸ್ ಸರಕಾರವು ರಜೆ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ನಗರದ ಅರಮನೆ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅನೇಕ ರಾಜ್ಯಗಳು 22ರಂದು ರಜೆ ಘೋಷಿಸಿವೆ. ಕೇಂದ್ರ ಸರಕಾರವೂ ಅರ್ಧ ದಿನ ರಜೆ ಘೋಷಿಸಿದೆ. ರಾಜ್ಯ ಸರಕಾರವೂ ರಜೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಹಿಂದುಗಳು ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಈ ಮೂಲಕ ಅವಕಾಶ ಮಾಡಿಕೊಡಿ ಎಂದು ಅವರು ತಿಳಿಸಿದರು.

ಅವಿನಾಭಾವ ಸಂಬಂಧವಿದೆ: ವಾಲ್ಮೀಕಿ ಸಮಾಜ ಮತ್ತು ಬಿಜೆಪಿ ನಡುವೆ ಅವಿನಾಭಾವ ಸಂಬಂಧವಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಎಸ್‍ಟಿ ಸಮುದಾಯಗಳ ಪಾತ್ರ ದೊಡ್ಡ ಮಟ್ಟದಲ್ಲಿತ್ತು.  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರದ ಅತ್ಯುನ್ನತ ಹುದ್ದೆ ರಾಷ್ಟ್ರಪತಿಗಳ ಸ್ಥಾನಕ್ಕೆ ಎಸ್‍ಟಿ ಸಮುದಾಯದ ಗೌರವಾನ್ವಿತ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ್ದಾರೆ. ಪ್ರಧಾನಿಯವರು ಎಸ್‍ಟಿ ಸಮುದಾಯದ ಬಗ್ಗೆ ಇಟ್ಟ ಕಳಕಳಿಯನ್ನು ಇದು ಸೂಚಿಸುತ್ತದೆ ಎಂದು ವಿಶ್ಲೇಷಿಸಿದರು.

ವಾಲ್ಮೀಕಿ ಜಯಂತಿಗೆ ರಜೆ : ಬಿಜೆಪಿ, ಎಸ್‍ಟಿ ಸಮುದಾಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ರಾಜ್ಯದಲ್ಲಿ ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ನಿರಂತರ ಹೋರಾಟ ನಡೆದಿತ್ತು. ಮೀಸಲಾತಿ ಪ್ರಮಾಣ ಹೆಚ್ಚಿಸಿದ ಕೀರ್ತಿ ಬಿಜೆಪಿ, ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಕೇವಲ ಉದ್ದುದ್ದ ಭಾಷಣ ಮಾಡುತ್ತಾರೆ. ಆದರೆ, ಬಿಜೆಪಿ ಹಾಗಲ್ಲ. ವಾಲ್ಮೀಕಿ ಜಯಂತಿಗೆ ರಜೆ ಘೋಷಿಸಿದ್ದು ಯಡಿಯೂರಪ್ಪ ಅವರ ಸರಕಾರ. ಅದರ ಸರಕಾರಿ ಆಚರಣೆಗೆ ಸೂಚಿಸಿತ್ತು ಎಂದು ನೆನಪಿಸಿದರು. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಇಡೀ ದೇಶದಲ್ಲಿ ಎಸ್‍ಟಿ ಸಮುದಾಯದ ಉನ್ನತಿಗೆ ಕಾರಣರಾದ ಭಗವಾನ್ ಬಿರ್ಸಾ ಮುಂಡ ಅವರ ಜನ್ಮದಿನವನ್ನು ನವೆಂಬರ್ 15ರಂದು ರಾಷ್ಟ್ರೀಯ ಜನಜಾತಿಯ ದಿನವೆಂದು ಆಚರಿಸಲು ತಿಳಿಸಿದ್ದಾರೆ. ಅವರ ಅಪೇಕ್ಷೆಯಂತೆ ಈ ಆಚರಣೆ ನಡೆದಿದೆ ಎಂದು ತಿಳಿಸಿದರು.

ಚುನಾವಣಾ ಗಿಮಿಕ್: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಕಾಂಗ್ರೆಸ್ ಪಕ್ಷವು ಚುನಾವಣಾ ಗಿಮಿಕ್ ಮಾಡುತ್ತಿದೆ. ಗ್ಯಾರಂಟಿಗಳನ್ನು ಅದಕ್ಕಾಗಿಯೇ ಘೋಷಿಸಿದೆ. ಅದು ಫಲಾನುಭವಿಗಳನ್ನು ಸರಿಯಾಗಿ ತಲುಪುತ್ತಿಲ್ಲ. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡಲು ಶ್ರಮಿಸುತ್ತಿದೆ ಎಂದರು.

ರಾಮಾಯಣಕ್ಕೆ ಗೌರವ ಕೊಡುವುದಿಲ್ಲವೇ ?: ಕೋಟ್ಯಂತರ ಹಿಂದೂಗಳು ಇವತ್ತು ಶ್ರೀರಾಮ ಮಂದಿರದ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಭು ಶ್ರೀರಾಮನ ಕುರಿತು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಶ್ರೀರಾಮಚಂದ್ರ ಇದ್ದನೋ ಇಲ್ಲವೋ ಎಂಬಂತೆ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆ. ಶ್ರೀರಾಮಚಂದ್ರನ ಅಸ್ತಿತ್ವವನ್ನು ಪ್ರಶ್ನಿಸುವ ಕಾಂಗ್ರೆಸ್ ಪಕ್ಷದವರು ಮಹರ್ಷಿ ವಾಲ್ಮೀಕಿಯವರ ರಾಮಾಯಣಕ್ಕೆ ಗೌರವ ಕೊಡುವುದಿಲ್ಲವೇ ಎಂದು ಪ್ರಶ್ನಿಸಿದರು.

ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯದ ಮಾಜಿ ಸಚಿವ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ಮತ್ತು ರಾಜ್ಯ ವಕ್ತಾರೆ ಡಾ. ತೇಜಸ್ವಿನಿಗೌಡ, ಮಾಜಿ ಶಾಸಕ ಶಿವನಗೌಡ ನಾಯಕ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮತ್ತು ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here